ಮತಾಂತರ ನಿಷೇಧಿಸಿ ವಿವಿಧ ರಾಜ್ಯಗಳಲ್ಲಿ ಜಾರಿಗೆ ಬಂದಿರುವ ಕಾಯಿದೆಗಳ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠ ಈ ಆದೇಶ ನೀಡಿದೆ.
ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಬೇರೆ ರಾಜ್ಯಗಳಲ್ಲಿ ಮತಾಂತರ ಕಾಯಿದೆ ಪ್ರಶ್ನಿಸಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಗಳು ಈಗಾಗಲೇ ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇವೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.
ವಿಷಯದ ಮಹತ್ವವನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣವನ್ನು ತ್ರಿಸದಸ್ಯ ಪೀಠದ ಮುಂದೆ ಇರಿಸುವಂತೆ ಆದೇಶಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಸಿದ್ಧವಾಗಿದ್ದು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತಿಳಿಸಿದರು. ಅರ್ಜಿದಾರರಾದ ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ ಪರವಾಗಿ ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಅವರು ವಾದ ಮಂಡಿಸಿದರು.
ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಮತಾಂತರ ಕಾನೂನುಗಳನ್ನು ಪ್ರಶ್ನಿಸಿರುವ ಅರ್ಜಿಯ ಕುರಿತು ನಾಲ್ಕು ವಾರಗಳ ಒಳಗೆ ಏಕೀಕೃತ ಪ್ರತಿ ಅಫಿಡವಿಟ್ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿತು.
ಕಳೆದ ವರ್ಷ, ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತನಗೆ ವರ್ಗಾಯಿಸಿಕೊಂಡಿತ್ತು.
ಈ ರೀತಿಯ ಮತಾಂತರ ನಿಷೇಧ ಕಾಯಿದೆಗಳಿಂದ ಮುಸ್ಲಿಮರು ಕಿರುಕುಳಕ್ಕೆ ತುತ್ತಾಗುತ್ತಿದ್ದಾರೆ ಎಂಧೂ ಜಮಿಯತ್- ಉಲೇಮಾ- ಎ- ಹಿಂದ್ ದೂರಿದ್ದ ಹಿನ್ನೆಲೆಯಲ್ಲಿ ಅದು ಪ್ರಕರಣವೊಂದರಲ್ಲಿ ಮಧ್ಯಪ್ರವೇಶ ಕೋರಿ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ 2021ರಲ್ಲಿ ಅನುಮತಿ ನೀಡಿತ್ತು.