Justices K Somashekar and Rajesh Rai K
Justices K Somashekar and Rajesh Rai K 
ಸುದ್ದಿಗಳು

5, 8 & 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಲು ಹೈಕೋರ್ಟ್‌ ನಕಾರ

Bar & Bench

ರಾಜ್ಯ ಪಠ್ಯ ಕ್ರಮ ಅಳವಡಿಸಿಕೊಂಡಿರುವ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಸ್ತೃತ ಪೀಠದ ವಿಚಾರಣೆಗೆ ವರ್ಗಾಯಿಸುವಂತೆ ಕೆಲ ವಿದ್ಯಾರ್ಥಿಗಳ ಮತ್ತವರ ಪೋಷಕರ ಸಲ್ಲಿಸಿದ್ದ ಮೆಮೊವನ್ನು ಗುರುವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ಅನುದಾನ ರಹಿತ ಶಾಲೆಗಳ ಕೆಲ ವಿದ್ಯಾರ್ಥಿಗಳು ಮತ್ತವರ ಪೂಷಕರ ಪರ ವಕೀಲರ ಮೆಮೊ ಸಲ್ಲಿಸಿ, ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ರಾಜೇಶ್‌ ರೈ ಕೆ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಕೋರಿದರು.

ಈ ಮನವಿಯನ್ನು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸಾ) ಪರ ವಕೀಲರು ಬೆಂಬಲಿಸಿದರು. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ಮುಂದೂಡಿ ಮಾರ್ಚ್‌ 12ರಂದು ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದೆ. ಪರೀಕ್ಷೆ ನಡೆಸುವ ಸಂಬಂಧ ಅಧಿಸೂಚನೆಯನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ಹಾಗೂ ಸುಪ್ರೀಂ ಕೋರ್ಟ್‌ ಸಹ ರದ್ದುಪಡಿಸಿವೆ. ಇಂತಹ ಸಂದರ್ಭದಲ್ಲಿ ಸುತ್ತೋಲೆ ಹೊರಡಿಸಿಯೇ ಸರ್ಕಾರ ಪರೀಕ್ಷೆ ಮುಂದೂಡಿದೆ. ಈ ಸುತ್ತೋಲೆ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮತ್ತೊಂದು ಮೊಮೊ ಸಲ್ಲಿಸಿದರು.

ಈ ಎರಡೂ ಮೆಮೊಗಳನ್ನು ತಿರಸ್ಕರಿಸಿದ ಪೀಠವು ಮೇಲ್ಮನವಿಯನ್ನು ವಿಚಾರಣೆ ನಡೆಸಿ ಶೀಘ್ರ ಸೂಕ್ತ ನಿರ್ಧಾರ ಪ್ರಕಟಿಸುವಂತೆ ಹೈಕೋರ್ಟ್‌ಗೆ (ವಿಭಾಗೀಯ ಪೀಠಕ್ಕೆ) ಸುಪ್ರೀಂ ಕೋರ್ಟ್‌ ಸೂಚಿಸಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿತು. ಅಂತೆಯೇ, ಮೇಲ್ಮನವಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಇದೇ ಸಂದರ್ಭದಲ್ಲಿ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಅವಕಾಶ ಕಲ್ಪಿಸಬಾರದು ಎಂದು ಕೋರಿ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳ ವಿಚಾರಣೆಯನ್ನು ಇನ್ನಷ್ಟೇ ನಡೆಸಬೇಕಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ಖಾಸಗಿ ಶಿಕ್ಷಣ ಸಂಸ್ಥೆಗ ಪರ ವಕೀಲರು, ಸರ್ಕಾರ ನಡೆಸುವುದಕ್ಕೆ ಮುಂದಾಗಿರುವ ಪರೀಕ್ಷಾ ಕ್ರಮ ಗೊಂದಲಗಳಿಂದ ಕೂಡಿದೆ. ಇದರಿಂದ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸರ್ಕಾರದ ಈ ಸುತ್ತೋಲೆ ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ 22ಕ್ಕೆ ಸೀಮಿತವಾಗಿಲ್ಲ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಅಲ್ಲದೆ, ಸರ್ಕಾರದ ಸುತ್ತೋಲೆಗಳನ್ನು ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ರದ್ದುಪಡಿಸಿದೆ. ಹೀಗಾಗಿ, ಸುತ್ತೋಲೆ ರದ್ದುಪಡಿಸಿರುವ ಕ್ರಮ ಸರಿಯಾಗಿದೆ ಎಂದು ವಿಭಾಗೀಯ ಪೀಠಕ್ಕೆ ವಿವರಿಸಿದರು.

ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ಅರ್ಜಿದಾರರು ವಿನಾಕಾರಣ ಪ್ರಕರಣ ಎಳೆದು ಹೋಗುತ್ತಿದ್ದಾರೆ. ಇದರಿಂದ ಮೇಲ್ಮನವಿ ಇತ್ಯರ್ಥಪಡಿಸಲು ವಿಳಂಬವಾಗಲಿದೆ. ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ ಪ್ರಕಾರ ರಾಜ್ಯ ಸರ್ಕಾರಕ್ಕೆ ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಅವಕಾಶವಿದೆ. ಅದರಂತೆ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.