Media Trial 
ಸುದ್ದಿಗಳು

ಮಾಧ್ಯಮಗಳಿಗೆ ತನಿಖಾ ಮಾಹಿತಿ ಸೋರಿಕೆ ಮಾಡಿದ ಪೊಲೀಸರ ವಿರುದ್ಧ ಕ್ರಮವೇನು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸ್‌ ಅಧಿಕಾರಿಗಳು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜೂನ್‌ 15ರಂದು ನ್ಯಾಯಾಲಯವು ನಿರ್ದೇಶನ ನೀಡಿತ್ತು.

Bar & Bench

ಅಂತಿಮ ವರದಿ ಸಲ್ಲಿಸುವುದಕ್ಕೂ ಮುನ್ನ ಸ್ವಯಂಪ್ರೇರಿತವಾಗಿ ಮಾಧ್ಯಮಗಳಿಗೆ ತನಿಖಾ ಮಾಹಿತಿ ಸೋರಿಕೆ ಮಾಡಿರುವ ಪೊಲೀಸ್‌ ಅಧಿಕಾರಿಗಳ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್‌ ಪ್ರಶ್ನಿಸಿದೆ.

“ಅಂತಿಮ ವರದಿ ಸಲ್ಲಿಸುವುದಕ್ಕೂ ಮುನ್ನ ಮಾಧ್ಯಮಗಳ ಮುಂದೆ ತೆರಳಿ ಪೊಲೀಸರು ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಬಹುದೇ? ಇಂಥ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಪೊಲೀಸ್‌ ಅಧಿಕಾರಿಗಳ ವಿರುದ್ಧ ಯಾವ ರೀತಿಯ ಕ್ರಮಕೈಗೊಂಡಿದ್ದೀರಿ? ಕಾನೂನು ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ?” ಎಂದು ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ಪೀಠ ಪ್ರಶ್ನಿಸಿದೆ.

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮದಲ್ಲಿ ಸುದ್ದಿ ಅಥವಾ ಕಾರ್ಯಕ್ರಮದ ಭಾಗವಾಗಿ ಅಸಭ್ಯ/ಅಶ್ಲೀಲ ಮಾಹಿತಿ ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಸಂಬಂಧ ಶಾಸನಬದ್ಧ ನಿಯಮಗಳನ್ನು ರೂಪಿಸುವ ಕುರಿತು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ಪೀಠ ನಡೆಸಿತು.

ವಿಚಾರಣೆ ಪೂರ್ಣಗೊಳ್ಳುವವರೆಗೆ ಆರೋಪಿಗಳು ಅಥವಾ ಸಂತ್ರಸ್ತರು ಅಥವಾ ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ಎಚ್ಚರವಹಿಸುವಂತೆ ಜೂನ್‌ 15ರ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿತ್ತು.

“ತನಿಖೆ ಪೂರ್ಣಗೊಳ್ಳುವವರೆಗೆ ಅದಕ್ಕೆ ಸಂಬಂಧಿಸಿದ ಮಾಹಿತಿ, ಆರೋಪಿಗಳು ಅಥವಾ ಸಂತ್ರಸ್ತರ ವಿಚಾರವನ್ನು ಪೊಲೀಸ್‌ ಅಧಿಕಾರಿಗಳು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜೂನ್‌ 15ರ ಆದೇಶದಲ್ಲಿ ನಿರ್ದೇಶಿಸಲಾಗಿತ್ತು… ಇದಕ್ಕೆ ಆಕ್ಷೇಪಣೆ ಏನು? ಎಫ್‌ಐಆರ್‌ ಅನ್ನು ಅಪ್‌ಲೋಡ್‌ ಮಾಡಬೇಕು ಎಂದು ಕಾನೂನು ಹೇಳಿದರೆ ನೀವು ಅದನ್ನು ಮಾಡಬೇಕು. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ” ಎಂದು ಸರ್ಕಾರಕ್ಕೆ ಪೀಠ ಹೇಳಿತು.

ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದಂತೆ ಸೂಚಿಸಿ ಜೂನ್‌ 27ರಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದರು. “ಎಲ್ಲಾ ಪೊಲೀಸ್‌ ಅಧಿಕಾರಿಗಳು ಮಾಧ್ಯಮಗಳ ಬಳಿಗೆ ಹೋಗಿ ಅವರಿಗೆ ಮಾಹಿತಿ ನೀಡುವುದಿಲ್ಲ” ಎಂದು ವಕೀಲರು ಹೇಳಿದರು.

ನ್ಯಾಯಾಲಯದ ಹಿಂದಿನ ಆದೇಶಗಳನ್ನು ಅನುಸರಿಸಲು ಹೆಚ್ಚುವರಿಯಾಗಿ ಎರಡು ವಾರಗಳ ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ಕೋರಿದರು. ಆಗಸ್ಟ್‌ 11ರ ವರೆಗೆ ಕಾಲಾವಕಾಶ ನೀಡಿರುವ ಪೀಠವು ಆಗಸ್ಟ್‌ 12ಕ್ಕೆ ವಿಚಾರಣೆ ಮುಂದೂಡಿತು.