Darshan and Pavitra Gowda 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಸೆ.30ರವರೆಗೆ ವಿಸ್ತರಣೆ

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್‌ 30ರವರೆಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಸ್ತರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ತಾಂತ್ರಿಕ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನಾಲ್ಕು ಗ್ಯಾಜೆಟ್‌ಗಳಿಗೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ನೀಡಿರುವ ವರದಿಯನ್ನು 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಸ್‌ ನಿರ್ಮಲಾ ಅವರಿಗೆ ಸಲ್ಲಿಸಲಾಯಿತು.

ಗ್ಯಾಜೆಟ್‌ಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ವರದಿಯನ್ನು ತನಿಖಾಧಿಕಾರಿಗೆ ನೀಡಲಾಗಿಲ್ಲ. ಇದರ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರು ಮತ್ತು ಆರೋಪಿಗಳಿಗೆ ನೀಡಲು ಅನುಮತಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.