Justice M Nagaprasanna 
ಸುದ್ದಿಗಳು

ಕೋಮು ದ್ವೇಷ ಆರೋಪ: ಶರಣ್‌ ಪಂಪ್‌ವೆಲ್‌ ವಿರುದ್ಧದ ಪ್ರಕರಣದ ತನಿಖೆಗೆ ತಡೆ ನೀಡಿದ ಹೈಕೋರ್ಟ್‌

ಮಂಗಳೂರು ನಗರದ ಸಿಇಎನ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

Bar & Bench

ಮಂಗಳೂರಿನ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕೋಮು ದ್ವೇಷ ಕೆರಳಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅಲಿಯಾಸ್ ಶರಣ್‌ ಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ಮಧ್ಯಂತರ ತಡೆ ನೀಡಿದೆ.

ಮಂಗಳೂರು ನಗರದ ಸಿಇಎನ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ಪೀಠವು ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎಂ ವಕೀಲ ಅರುಣ್‌ ಶ್ಯಾಮ್‌ ವಾದಿಸಿದರು.

ಪ್ರಕರಣದ ಹಿನ್ನೆಲೆ: ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಕ್ಕೆ ಕದ್ರಿ ಠಾಣಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ನಂತರದ ಕೆಲವೇ ಗಂಟೆಗಳಲ್ಲಿ ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿ, ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದರು.

ಇದಕ್ಕೆ ಆಕ್ಷೇಪಿಸಿದ್ದ ಶರಣ್ ಪಂಪವೆಲ್‌, ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಲಾಗಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ, ಅದನ್ನು ಬಜರಂಗದಳ ನಿಲ್ಲಿಸುತ್ತದೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಮತ್ತು ಕೋಮುದ್ವೇಷ ಸೃಷ್ಟಿಸುವ ಪ್ರಯತ್ನ ಎಂಬ ಆರೋಪದಡಿ ಮಂಗಳೂರು ನಗರ ಸಿಇಎನ್‌ ಠಾಣಾ ಪೊಲೀಸರು ಶರಣ್‌ ಪಂಪ್‌ವೆಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.