BBMP and Karnataka HC 
ಸುದ್ದಿಗಳು

ಬಿಬಿಎಂಪಿ ಕ್ಷೇತ್ರ ಪುನರ್‌ ವಿಂಗಡಣೆ ತಾರತಮ್ಯ: ರಾಜ್ಯ ಸರ್ಕಾರ, ಆಯೋಗ, ಪಾಲಿಕೆಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

ಆಗಸ್ಟ್‌ 16ರವರೆಗೆ ವಾರ್ಡ್‌ವಾರು ಮೀಸಲು ಪಟ್ಟಿ ಅಂತಿಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ನ್ಯಾಯಾಲಯವು ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

Bar & Bench

ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳ ಪುನರ್ ವಿಂಗಡಣೆ ವಿವಾದದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಮತ್ತು ಪಾಲಿಕೆ ಆಯುಕ್ತರಿಗೆ ಬುಧವಾರ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಅಲ್ಲದೇ, ಆಗಸ್ಟ್‌ 16ರವರೆಗೆ ವಾರ್ಡ್‌ವಾರು ಮೀಸಲು ಪಟ್ಟಿ ಅಂತಿಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ವಾರ್ಡ್‌ಗಳ ಮರು ವಿಂಗಡಣೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆಕ್ಷೇಪಿಸಿ ವಕೀಲ ಎಸ್ ಇಸ್ಮಾಯಿಲ್ ಜಬಿವುಲ್ಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲರು, “ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್‌ಗಳನ್ನು ಪುನರ್ ವಿಂಗಡಣೆ ಮಾಡಲಾಗಿದೆ. ವಾರ್ಡ್‌ಗಳ ಜನಸಂಖ್ಯೆ ನಿಗದಿಯಲ್ಲೂ ತಾರತಮ್ಯ ಮಾಡಲಾಗಿದೆ. ಆದ್ದರಿಂದ ವಾರ್ಡ್ ಮರು ವಿಂಗಡಣೆಯ ಅಧಿಸೂಚನೆ ರದ್ದುಪಡಿಸಬೇಕು. ಈ ಅರ್ಜಿ ಇತ್ಯರ್ಥವಾಗುವವರೆಗೆ ಬಿಬಿಎಂಪಿ ವಾರ್ಡ್‌ಗಳಿಗೆ ಮೀಸಲು ಪಟ್ಟಿ ಅಂತಿಮಗೊಳಿಸುವುದಕ್ಕೆ ತಡೆಯಾಜ್ಞೆ ನೀಡಬೇಕು” ಎಂದು ಕೋರಿದರು.

ಇದಕ್ಕೆ ಪೀಠವು “ಅರ್ಜಿ ಇದೇ ಮೊದಲ ಬಾರಿಗೆ ವಿಚಾರಣೆಗೆ ಬಂದಿದೆ. ಮೊದಲ ವಿಚಾರಣೆಯಲ್ಲಿಯೇ ಯಾವುದೇ ಮಧ್ಯಂತರ ಆದೇಶ ನೀಡಲಾಗದು. ಪ್ರತಿವಾದಿಗಳ ವಾದ ಆಲಿಸಬೇಕಿದೆ. ವಾರ್ಡ್‌ವಾರು ಮತದಾರರ ಪಟ್ಟಿ ಸಿದ್ಧವಾಗಿದೆಯೇ ಎಂದು ತಿಳಿದುಕೊಳ್ಳಬೇಕಿದೆ. ಪ್ರತಿವಾದಿಗಳ ವಾದ ಆಲಿಸಿದ ಬಳಿಕವೇ ಮಧ್ಯಂತರ ಆದೇಶದ ಬಗ್ಗೆ ನಿರ್ಧಾರ ಮಾಡಲಾಗುವುದು” ಎಂದಿತು.

ಮುಂದುವರಿದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್‌ 16ಕ್ಕೆ ಮುಂದೂಡಿತು. ಅಲ್ಲಿಯವರೆಗೆ ವಾರ್ಡ್‌ವಾರು ಮೀಸಲು ಪಟ್ಟಿ ಅಂತಿಮಗೊಳಿಸಬಾರದು ಎಂದು ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿತು.