ಬೆಳಗಾವಿಯಲ್ಲಿ ಜನವರಿ 17ರಂದು ಬಿಜೆಪಿ ಆಯೋಜಿಸಿದ್ದ ರಾಜಕೀಯ ಸಮಾವೇಶದಲ್ಲಿ ಕೇವಲ ಆರು ಮಂದಿ ಮಾತ್ರ ಮಾಸ್ಕ್ ಧರಿಸದೇ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ಪೊಲೀಸ್ ಆಯುಕ್ತರು ಅಫಿಡವಿಟ್‌ನಲ್ಲಿ ಉಲ್ಲೇಖಿಸಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ಬಿಜೆಪಿಯು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾವೇಶ ಆಯೋಜಿಸಿತ್ತು. ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಸಾವಿರಾರು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು ಎಂದು ಹಿಂದೆ ಪೀಠಕ್ಕೆ ಮನವರಿಕೆ ಮಾಡಿಕೊಡಲಾಗಿತ್ತು.
ಸಮಾವೇಶದಲ್ಲಿ ಕೇವಲ ಆರು ಮಂದಿ ಮಾತ್ರ ಮಾಸ್ಕ್ ಧರಿಸಿರಲಿಲ್ಲ ಎಂದು ಹೇಳುತ್ತಿರುವುದರಲ್ಲೇನೋ ʼಮೂಲ ದೋಷʼ ಇದ್ದು, ರ್‍ಯಾಲಿಯ ಛಾಯಾಚಿತ್ರಗಳು ಇದಕ್ಕೆ ವ್ಯತಿರಿಕ್ತವಾಗಿವೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಹೇಳಿತು.
“ಸಮಾವೇಶದಲ್ಲಿ ಕೇವಲ ಆರು ಮಂದಿ ಮಾತ್ರ ಮಾಸ್ಕ್ ಧರಿಸಿರಲಿಲ್ಲ ಎಂದು ಹೇಳುತ್ತಿರುವುದರಲ್ಲೇನೋ ʼಮೂಲ ದೋಷʼ ಇದ್ದು, ರ್‍ಯಾಲಿಯ ಛಾಯಾಚಿತ್ರಗಳು ಇದಕ್ಕೆ ವ್ಯತಿರಿಕ್ತವಾಗಿವೆ. ಆಯುಕ್ತರು ಅಪಹಾಸ್ಯ ಮಾಡುತ್ತಿದ್ದಾರೆ. ಸಾವಿರಾರು ಜನರು ಭಾಗವಹಿಸಿದ್ದ ಸಮಾವೇಶದಲ್ಲಿ ಕೇವಲ ಆರು ಮಂದಿ ಮಾತ್ರ ಮಾಸ್ಕ್ ಧರಿಸಿರಲಿಲ್ಲವೇ? ಯಾವ ಆಧಾರದಲ್ಲಿ ಆಯುಕ್ತರು ಇದನ್ನು ಹೇಳಿದ್ದಾರೆ? ಛಾಯಾಚಿತ್ರಗಳು ಇವೆ” ಎಂದು ನ್ಯಾಯಾಲಯ ಕಟುವಾಗಿ ನುಡಿಯಿತು.
ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಲೆಟ್ಜ್‌ಕಿಟ್ ಫೌಂಡೇಶನ್ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ಪೀಠವು, ಮಾಸ್ಕ್ ಧರಿಸದೆ ಸಮಾವೇಶದಲ್ಲಿ ಭಾಗವಹಿಸಿದ್ದ ಎಲ್ಲರೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ ಸೆಕ್ಷನ್ 5 ಅನ್ನು ಉಲ್ಲಂಘಿಸಿದ್ದಾರೆ ಎಂದಿತು.
ಮೇ 14ರಂದು ಎಫ್‌ಐಆರ್ ದಾಖಲಿಸಲಾಗಿದ್ದು, ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ, ಕಾನೂನು ಉಲ್ಲಂಘಿಸಿದ ಎಲ್ಲರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಪೀಠಕ್ಕೆ ಭರವಸೆ ನೀಡಿದರು. “ದಂಡ ವಿಧಿಸಲಾಗಿದ್ದು, ಎಫ್‌ಐಆರ್ ಸಹ ದಾಖಲಿಸಲಾಗಿದೆ. ಪ್ರಾಮಾಣಿಕವಾಗಿ ತನಿಖೆ ನಡೆಸುತ್ತೇವೆ” ಎಂದರು.
ಆಗ ಮಧ್ಯಪ್ರವೇಶಿಸಿದ ಪೀಠವು ಸಮಾವೇಶ ನಡೆದ ಐದು ತಿಂಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ ಎಂದಿತು. ಇದಕ್ಕೆ ನಾವದಗಿ ಅವರು “ತಾವು ಮಧ್ಯಪ್ರವೇಶಿಸಿದ ಬಳಿಕ ಕ್ರಿಮಿನಲ್ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಮೈ ಲಾರ್ಡ್” ಎಂದರು.
ಇಲ್ಲಿಯವರೆಗೆ ನಡೆಸಿರುವ ತನಿಖೆಯ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಜುಲೈ 19ರ ಒಳಗೆ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಪೀಠ ನಿರ್ದೇಶಿಸಿದ್ದು, ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.