ಕೋಟ್ಯಂತರ ರೂಪಾಯಿ ಮೊತ್ತದ ಆಂಧ್ರಪ್ರದೇಶ ಕೌಶಲಾಭಿವೃದ್ಧಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 18ರವರೆಗೆ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸದಂತೆ ರಾಜ್ಯ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ [ನಾರಾ ಚಂದ್ರಬಾಬು ನಾಯ್ಡು ಮತ್ತು ಆಂಧ್ರಪ್ರದೇಶ ಸರ್ಕಾರ ನಡುವಣ ಪ್ರಕರಣ].
ನಾಯ್ಡು ಅವರನ್ನು ಸಿಐಡಿ ಸೆಪ್ಟೆಂಬರ್ 18ರವರೆಗೆ ವಶಕ್ಕೆ ಪಡೆಯುವಂತಿಲ್ಲ ಅಲ್ಲಿಯವರೆಗೆ ಅವರು ನ್ಯಾಯಾಂಗ ಬಂಧನದಲ್ಲಿಯೇ ಇರುತ್ತಾರೆ ಎಂದು ನ್ಯಾಯಮೂರ್ತಿ ಕೆ ಶ್ರೀನಿವಾಸ ರೆಡ್ಡಿ ಸೂಚಿಸಿದರು. ಸೆ.19ರಂದು ಹೈಕೋರ್ಟ್‌ನಲ್ಲಿ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.
ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯದ ಆದೇಶ ಪ್ರಶ್ನಿಸಿ ನಾಯ್ಡು ಸಲ್ಲಿಸಿದ್ದ ಮನವಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು.
ಕೌಶಲಾಭಿವೃದ್ಧಿ ಯೋಜನೆಗಾಗಿ ಮೀಸಲಿಟ್ಟ ಸರ್ಕಾರಿ ಹಣವನ್ನು ನಕಲಿ ಬಿಲ್ ಸೃಷ್ಟಿಸಿ ವಿವಿಧ ಬೇನಾಮಿ ಕಂಪೆನಿಗಳಿಗೆ ವರ್ಗಾಯಿಸಿದ್ದಕ್ಕೆ ಸಂಬಂಧಿಸಿದ ಹಗರಣ ಇದಾಗಿದ್ದು ನಾಯ್ಡು ಅವರನ್ನು ಕಳೆದ ಶನಿವಾರ ಬಂಧಿಸಲಾಗಿತ್ತು.