Karnataka HC and CBI
Karnataka HC and CBI 
ಸುದ್ದಿಗಳು

ಪುತ್ರಿ ಸೌಜನ್ಯ ಕೊಲೆ ಪ್ರಕರಣದಲ್ಲಿ ತಂದೆಯಿಂದ ಮೇಲ್ಮನವಿ: ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ

Bar & Bench

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ತನಿಖಾ ದಳಕ್ಕೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿ ಮಾಡಿದೆ.

ಮೃತ ಯುವತಿ ಸೌರ್ಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಡಗಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ಪೀಠವು ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಇದೇ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿರುವ ಪೀಠವು ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಅನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂನ್‌ 16ರಂದು ಆದೇಶಿಸಿತ್ತು. ಆ ಆದೇಶದಲ್ಲಿ ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ಗೋಲ್ಡನ್‌ ಅವರ್‌ನಲ್ಲಿ ತನಿಖೆಯನ್ನು (ಪ್ರಕರಣ ಘಟಿಸಿದ ಅಲ್ಪ ಅವಧಿಯಲ್ಲಿಯೇ ನಡೆಸುವ ಮಾಹಿತಿ, ಸಾಕ್ಷ್ಯ ಸಂಗ್ರಹ) ಸಮರ್ಪಕವಾಗಿ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ನಡೆದಿಲ್ಲ ಎಂಬುದು ಸ್ಪಷ್ಟವಾಗಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.