Lokayukta and Karnataka HC
Lokayukta and Karnataka HC 
ಸುದ್ದಿಗಳು

ಉಪ ಲೋಕಾಯುಕ್ತರ ಎರಡನೇ ಹುದ್ದೆಗೆ ನೇಮಕ ಪ್ರಕ್ರಿಯೆ ಆರಂಭ: ನ್ಯಾಯಾಂಗ ನಿಂದನೆ ಕೈಬಿಡುವಂತೆ ಹೈಕೋರ್ಟ್‌ಗೆ ಸರ್ಕಾರ ಮನವಿ

Siddesh M S

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಎರಡನೇ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಈಚೆಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.

ಅರ್ಜಿದಾರ ವಕೀಲ ಎಸ್‌ ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜನವರಿ 27ರಂದು ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು. ಉಪಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹಾಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರು ಅಭಿಪ್ರಾಯ ನೀಡಬೇಕಿರುವುದರಿಂದ ಪ್ರಕರಣದ ವಿಚಾರಣೆಯನ್ನು ಕಳೆದ ಬುಧವಾರ ನ್ಯಾ. ಅಲೋಕ್‌ ಆರಾಧೆ ಮತ್ತು ನ್ಯಾ. ಹೇಮಂತ್‌ ಚಂದನಗೌಡರ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆಯಲ್ಲಿ ಭಾಗಿಯಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ರಾಜ್ಯ ಸರ್ಕಾರವು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ದಾಖಲೆಯಲ್ಲಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು. ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಿ ಹೇಮಲತಾ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಪಾಲನಾ ವರದಿಯನ್ನು ಸಲ್ಲಿಸಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಪೀಠವು ನವೆಂಬರ್‌ 8ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ “ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್‌ ಆನಂದ್‌ ಅವರು ಕಳೆದ ವರ್ಷದ ಡಿಸೆಂಬರ್ 16ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜನವರಿ 27ರಂದು ಹೈಕೋರ್ಟ್‌ ಆದೇಶಿಸಿತ್ತು. ಕೋವಿಡ್‌ ಸಂದರ್ಭದಲ್ಲಿ ಇಡೀ ಆಡಳಿತ ಯಂತ್ರವನ್ನು ಕೊರೊನಾ ವೈರಸ್‌ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ. ಉಪ ಲೋಕಾಯುಕ್ತರನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು” ಎಂದು ಮನವಿ ಮಾಡಲಾಗಿದೆ.

ಉಪ ಲೋಕಾಯುಕ್ತರನ್ನು ನೇಮಿಸುವ ಸಂಬಂಧ ಹೈಕೋರ್ಟ್ ಹಂಗಾಮಿ‌ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಎಸ್‌ ಆರ್‌ ಪಾಟೀಲ್‌ ಅವರಿಗೆ ಸೂಕ್ತ ಹೆಸರನ್ನು ಸೂಚಿಸುವಂತೆ ಕೋರಿ ಸೆಪ್ಟೆಂಬರ್ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೆದಿರುವ ಪತ್ರಗಳನ್ನು ಲಗತ್ತಿಸಲಾಗಿದೆ.

“ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ರ ಸೆಕ್ಷನ್ 3(2)(ಬಿ)ರ ಅಡಿ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುವವರು ಕಡ್ಡಾಯವಾಗಿ ಐದು ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿರಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ಸೂಚಿಸಿದರೆ ತಮ್ಮ ಅಭಿಪ್ರಾಯವನ್ನು ಸೇರಿಸಿ ರಾಜ್ಯಪಾಲರ ಅನುಮೋದನೆ ಕಳುಹಿಸಿಕೊಡಲಾಗುವುದು” ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯಲ್ಲಿ ಎರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, 2019ರ ನವೆಂಬರ್‌ 20ರಂದು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ನ್ಯಾ. ಎನ್‌ ಆನಂದ್‌ ಅವರ ನಿವೃತ್ತಿಯ ಬಳಿಕ ಮತ್ತೊಂದು ಸ್ಥಾನ ಖಾಲಿ ಉಳಿದಿದೆ.