Karnataka High Court
Karnataka High Court 
ಸುದ್ದಿಗಳು

ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ ಕೋರಿ ಅರ್ಜಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

Bar & Bench

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರಿನ ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಪೀಠವು ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ ಕಾರ್ಯದರ್ಶಿ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಕೀಲ ಎಸ್ ಉಮಾಪತಿ ಅವರು “ರಾಜ್ಯದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆ ಖಾಲಿ ಆಗಿ ಹಲವು ತಿಂಗಳುಗಳೇ ಕಳೆದಿದ್ದರೂ ಸರ್ಕಾರ ಅವುಗಳನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ರಾಜ್ಯದ ದೂರದ ಊರುಗಳಿಂದ ಬರುವ ಜನರು ತಮ್ಮ ಹಕ್ಕುಗಳಿಗೆ ಧಕ್ಕೆ ಆಗಿರುವ ಬಗ್ಗೆ ದೂರು ಸಲ್ಲಿಸಲು ಸಾಧ್ಯವಾಗುತ್ತಿಲ್ಲ" ಎಂದು ಪೀಠಕ್ಕೆ ವಿವರಿಸಿದರು.

ಅಲ್ಲದೇ, “ಆಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ನ್ಯಾಯಮೂರ್ತಿ ಡಿ ಎಚ್ ವಘೇಲಾ ಅವರ ಅವಧಿಯು 2023ರ ಮಾರ್ಚ್‌ 10ಕ್ಕೆ, ಆಯೋಗದ ಸದಸ್ಯ ಕೆ ಬಿ ಚಂಗಪ್ಪ ಅವರ ಅವಧಿಯು 2023ರ ಫೆಬ್ರವರಿ 17ಕ್ಕೆ, ಮತ್ತೋರ್ವ ಸದಸ್ಯ ಆರ್ ಕೆ ದತ್ತ ಅವರ ಅವಧಿಯು 2023ರ ಫೆಬ್ರವರಿ 24ಕ್ಕೆ ಮತ್ತು ಮುಕ್ತಾಯವಾಗಿದೆ. ಅರ್ಜಿದಾರರು 2023ರ ಮಾರ್ಚ್‌ 24ಕ್ಕೆ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಸರ್ಕಾರ ಈವರೆಗೂ ಕ್ರಮ ಕೈಗೊಂಡಿಲ್ಲ” ಎಂದರು.

ಸುಪ್ರೀಂ ಕೋರ್ಟ್ ಡಿ ಕೆ ಬಸು ಪ್ರಕರಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳು ಖಾಲಿಯಾದರೆ ಅವುಗಳನ್ನು ತಕ್ಷಣವೇ ಅಂದರೆ ಮೂರು ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಆ ತೀರ್ಪನ್ನು ಪಾಲನೆ ಮಾಡಿಲ್ಲ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಸಂಬಂಧ ನಿರ್ಲಕ್ಷ್ಯವನ್ನು ಮುಂದುವರಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.