Karnataka High Court 
ಸುದ್ದಿಗಳು

ಸಚಿವರ ಟಿಪ್ಪಣಿ ಅನ್ವಯ ದೇವಸ್ಥಾನದ ಮಂಡಳಿಗೆ ಸದಸ್ಯರ ನೇಮಕ: ಸರ್ಕಾರಕ್ಕೆ ನೋಟಿಸ್‌

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಫಾರಸ್ಸು ಮಾಡಿದ್ದವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲು ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.

Bar & Bench

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಟಿಪ್ಪಣಿ ಆಧರಿಸಿ ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನರ್ದಾನ ಪೂಜಾರಿ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿಯು ವಿಚಾರಣೆಗೆ ಬಂದಿತ್ತು.

ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ವ್ಯವಸ್ಥಾಪನಾ ಸಮಿತಿಗೆ ನೇಮಕವಾಗಿರುವ ಸದಸ್ಯರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ಪೀಠ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಶಿಫಾರಸ್ಸು ಪತ್ರದಲ್ಲಿ ಸಲ್ಲಿಸಿದ್ದ ಪಟ್ಟಿಯಲ್ಲಿದ್ದವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ ಜಿಲ್ಲಾ ಧಾರ್ಮಿಕ ಪರಿಷದ್ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಎಂ ರಾಘವೇಂದ್ರ, ನೀನಾ ಕುಮಾರ್, ಪಿ ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್ ರಾಘವ, ಕೆ ಹರೀಶ್ ಹಾಗೂ ಬಿ ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿಯು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯಿದೆಗೆ ವಿರುದ್ಧವಾಗಿದೆ. ಆದ್ದರಿಂದ ನೇಮಕಾತಿಯನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.