Karnataka High Court
Karnataka High Court 
ಸುದ್ದಿಗಳು

ವಿಪಕ್ಷ ನಾಯಕ ಇಲ್ಲದಿರುವುದರಿಂದ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಇಬ್ಬರು ಸದಸ್ಯರ ನೇಮಕ ವಿಳಂಬ: ಸರ್ಕಾರದ ವಿವರಣೆ

Bar & Bench

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆಯಾಗಿಲ್ಲದಿರುವುದರಿಂದ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಇಬ್ಬರು ಸದಸ್ಯರನ್ನು ನೇಮಕಾತಿ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ಹಾಜರಾದ ಅಡ್ವೊಕೇಟ್‌ ಜನರಲ್ ಕೆ ಶಶಿಕಿರಣ್‌ ಶೆಟ್ಟಿ ಅವರು “ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ನಾಗರಿಕ ಸಮಾಜದಿಂದ (ಸಿವಿಲ್‌ ಸೊಸೈಟಿ) ಒಬ್ಬರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕವಾಗಿಲ್ಲ. ಇದಕ್ಕೆ ವಿರೋಧ ಪಕ್ಷದ ನಾಯಕರು ಆಯ್ಕೆಯಾಗಿಲ್ಲದಿರುವುದು ಕಾರಣ. ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕರೂ ಒಬ್ಬ ಸದಸ್ಯರಾಗಿದ್ದಾರೆ. ಈ ಕಾರಣಕ್ಕಾಗಿ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಇನ್ನಿಬ್ಬರು ಸದಸ್ಯರ ನೇಮಕಾತಿಯಲ್ಲಿ ವಿಳಂಬವಾಗುತ್ತಿದೆ” ಎಂದರು.

“ಪೊಲೀಸ್‌ ದೂರು ಪ್ರಾಧಿಕಾರದಲ್ಲಿ ಅಧ್ಯಕ್ಷರೂ ಸೇರಿ ಐದು ಮಂದಿ ಇದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್ ಕೆ ಸುಧೀಂದ್ರ ರಾವ್ ಅವರನ್ನು 2023ರ ಜುಲೈ 31ರಂದು ನೇಮಕ ಮಾಡಲಾಗಿದ್ದು, ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪ್ರಾಧಿಕಾರವು ಮೂರು ಸ್ಥಾನದೊಂದಿಗೆ ಕೆಲಸ ಮಾಡುತ್ತಿದೆ. ಅದು ಕೆಲಸ ಮಾಡುತ್ತಿಲ್ಲ ಎಂಬ ಭಾವನೆ ಬೇಡ. ಉಳಿದ ಇಬ್ಬರು ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು” ಎಂದರು.

ಇದನ್ನು ದಾಖಲಿಸಿಕೊಂಡ ಪೀಠವು ಉಳಿದ ಇಬ್ಬರು ಸದಸ್ಯರ ನೇಮಕವನ್ನು ನಾಲ್ಕು ವಾರಗಳ ಒಳಗೆ ಮಾಡಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು. ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್ ಖುದ್ದು ಹಾಜರಿದ್ದರು.