ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ತಮಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ಕೆಂದು ನೀಡಿರುವ ಮಧ್ಯಂತರ ಜಾಮೀನನ್ನು ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ಮೇ 10ರಂದು ಆದೇಶಿಸಿತ್ತು.
ಕೆಲ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕಾಗಿರುವುದರಿಂದ ಜೂನ್ 8ರವರೆಗೆ ಒಂದು ವಾರ ಕಾಲ ತಮಗೆ ನೀಡಿರುವ ಜಾಮೀನನ್ನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪ್ರಾರ್ಥಿಸಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ನೀಡಿದ ದೂರಿನ ಮೇರೆಗೆ 2022ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು. ಅದರ ಬೆನ್ನಿಗೆ ಕೇಜ್ರಿವಾಲ್ ವಿರುದ್ಧ ಇ ಡಿ ತನಿಖೆ ನಡೆಸಿತ್ತು.
ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ 2021-22ರ ದೆಹಲಿ ಅಬಕಾರಿ ನೀತಿಯನ್ನು ಸಡಿಲಗೊಳಿಸಲು ಸೃಷ್ಟಿಸಲು ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ವಿವಿಧ ಎಎಪಿ ನಾಯಕರು ಕ್ರಿಮಿನಲ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಇ ಡಿ ಬಂಧಿಸಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಅನುವಾಗುವಂತೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿ ಮೇ 10ರಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು.
ಮೇ 17 ರಂದು ಕೇಜ್ರಿವಾಲ್ ಅವರ ಶಾಶ್ವತ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.