ಅರವಿಂದ್ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮತ್ತು ಇಡಿ
ಅರವಿಂದ್ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮತ್ತು ಇಡಿ ಫೇಸ್ ಬುಕ್
ಸುದ್ದಿಗಳು

ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ತಡೆಹಿಡಿಯುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿವಾಲ್

Bar & Bench

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಬಂಧನದಿಂದ ತಮ್ಮನ್ನು ರಕ್ಷಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ (ಸಿಎಂ) ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜಾರಿ ನಿರ್ದೇಶನಾಲಯದ ಸಮನ್ಸ್ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಬೆಳಗ್ಗೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ವಿಭಾಗೀಯ ಪೀಠ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿತ್ತು.

ಮಧ್ಯಂತರ ರಕ್ಷಣೆಗಾಗಿ ಕೇಜ್ರಿವಾಲ್ ಅವರು ಮಾಡಿರುವ ಮನವಿಯನ್ನು ಏಪ್ರಿಲ್ 22 ರಂದು ಇಡಿ ಸಮನ್ಸ್ ಪ್ರಶ್ನಿಸಿರುವ ಅವರ ಮುಖ್ಯ ಅರ್ಜಿಯೊಂದಿಗೆ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ಹೇಳಿತ್ತು.

ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕೇಂದ್ರೀಯ ತನಿಖಾ ಸಂಸ್ಥೆಯು ಒಂಬತ್ತು ಬಾರಿ ಸಮನ್ಸ್‌ ನೀಡಿತ್ತು. ಆದಾಗ್ಯೂ, ಅವರು ಪ್ರತಿ ಬಾರಿಯೂ ಹಾಜರಾಗಲು ನಿರಾಕರಿಸಿದ್ದರು. ಏಜೆನ್ಸಿಯ ಸಮನ್ಸ್ ದುರುದ್ದೇಶಪೂರಿತವಾಗಿದೆ ಎಂದಿದ್ದ ಕೇಜ್ರಿವಾಲ್‌ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಇಡಿ ಪ್ರಕರಣದ ವಿಚಾರಣೆಯನ್ನು ತಡೆಹಿಡಿಯುವಂತೆ ಸೆಷನ್ಸ್ ನ್ಯಾಯಾಲಯದ ಮುಂದೆ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಮಾರ್ಚ್ 15 ರಂದು ತಿರಸ್ಕರಿಸಲಾಗಿತ್ತು.

ಜಾರಿ ನಿರ್ದೇಶನಾಲಯದ ಸಮನ್ಸ್ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ 2 (1) (ಎಸ್) ಅನ್ನು ಪ್ರಶ್ನಿಸಿ ಕೇಜ್ರಿವಾಲ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.