High Court of Karnataka 
ಸುದ್ದಿಗಳು

ಬೆಂಗಳೂರು ಬಂದ್‌: ಜನಜೀವನಕ್ಕೆ ತೊಂದರೆಯಾಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬಂದ್‌ನಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸರ್ಕಾರಿ ಹಾಗೂ ಖಾಸಗಿ ಸ್ವತ್ತುಗಳಿಗೆ ಹಾನಿಯಾಗಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ.

Bar & Bench

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಪರ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜೀವನ ಅಸ್ತವ್ಯಸ್ತವಾಗದಂತೆ, ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸರ್ಕಾರಿ ಹಾಗೂ ಖಾಸಗಿ ಸ್ವತ್ತುಗಳಿಗೆ ಹಾನಿಯಾಗಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಗೆ ನಿರ್ದೇಶಿಸಲು ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಸೋಮವಾರ ನ್ಯಾಯಮೂರ್ತಿ ಜಿ.ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ ಜನರಲ್ ಕೆ.ಶಶಿಕಿರಣ್‌ ಶೆಟ್ಟಿ ಹಾಜರಾಗಿ, ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ‌ ನೀಡಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.

ಅರ್ಜಿದಾರರ ಪರ ವಕೀಲ ಜಿ ಆರ್‌ ಮೋಹನ್‌, ಬಂದ್‌ಗೆ ಕರೆ ನೀಡಿರುವ ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ ಇದರಿಂದ ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಬಂದ್‌ ನಡೆದಾಗ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಅಹಿತಕರ ಘಟನೆಗಳು ನಡೆದು ಸರ್ಕಾರಿ ಮತ್ತು ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಬಂದ್‌ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್‌ 2020ರ ಫೆ.20ರಂದು ಆದೇಶಿಸಿತ್ತು. ಸರ್ಕಾರಿ-ಖಾಸಗಿ ಆಸ್ತಿಗೆ ಉಂಟಾದ ನಷ್ಟ ಅಂದಾಜಿಸಿ, ವಸೂಲಿ ಮಾಡಲು ಕ್ಲೇಮು ಕಮೀಷನರ್‌ ನೇಮಕಕ್ಕೂ ಆದೇಶಿಸಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಬಂದ್‌ ಸಂದರ್ಭದಲ್ಲಿ ಸಾರ್ವಜನಿಕ ಜೀವನ ಅಸ್ತವ್ಯಸ್ತವಾಗದಂತೆ, ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಸಮಗ್ರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ. ಆ ಬಗ್ಗೆ ನ್ಯಾಯಾಲಯವು ಪ್ರತ್ಯೇಕವಾಗಿ ಯಾವುದೇ ನಿರ್ದೇಶನ ನೀಡುವ ಅನಿವಾರ್ಯತೆ ಇಲ್ಲ ಎಂದು ಮೌಖಿಕವಾಗಿ ಹೇಳಿತು. ಬಂದ್‌ ವಿಚಾರದಲ್ಲಿ ಹೈಕೋರ್ಟ್‌ ಈ ಹಿಂದೆಯೇ ಸಮಗ್ರವಾದ ನಿರ್ದೇಶನಗಳನ್ನು ನೀಡಿದೆ. ಹಾಗಾಗಿ, ಅರ್ಜಿ ಸಂಬಂಧ ಯಾವುದೇ ನಿರ್ದೇಶನ ನೀಡುವ ಅಗತ್ಯ ಕಂಡುಬರುತ್ತಿಲ್ಲ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿದೆ.