Home Minister G Parameshwar 
ಸುದ್ದಿಗಳು

ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್: ಸಚಿವ ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಮ್ಯಾಜಿಸ್ಟ್ರೇಟ್‌ ಆದೇಶ

ಇದು ಶಾಸಕರ ಅಥವಾ ಜಿಲ್ಲಾಧಿಕಾರಿಗಳ ಅಧಿಕೃತ ಕರ್ತವ್ಯದ ಭಾಗವಲ್ಲ. ಆದ್ದರಿಂದ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರ ಅಥವಾ ಸರ್ಕಾರದ ಪೂರ್ವಾನುಮತಿಯ ಅಗತ್ಯವಿಲ್ಲ ಎಂದಿರುವ ಮ್ಯಾಜಿಸ್ಟ್ರೇಟ್‌.

Bar & Bench

ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿ‌ನಿಧಿಗಳ ವಿಶೇಷ‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಎಚ್ ಆರ್ ನಾಗಭೂಷಣ್ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೆ ಎನ್‌ ಶಿವಕುಮಾರ್ ಅವರು ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊರಟಗೆರೆ ತಾಲ್ಲೂಕಿನ‌ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಿದ್ದಾರೆ.

K N Shivakumar, Magistrate MP/MLA Special court

ಕಳೆದ ವರ್ಷ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಕೊರಟೆಗೆರೆ ಶಾಸಕರೂ ಆದ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿಗಳು ಗೆದ್ದ ತಂಡವಾದ ದಕ್ಷಿಣ ಕನ್ನಡ ತಂಡದ ವಿರುದ್ಧ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾರೆ ಹಾಗೂ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೇರೇಪಿಸಿದ್ದಾರೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಿದ್ದ ನಾಗಭೂಷಣ್, ಪ್ರಕರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳ ಪ್ರತಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಲ್ಲಿಸಲಾಗಿದ್ದ ದೂರನ್ನು 'ಆಧಾರರಹಿತ' ಎಂಬ ಕಾರಣ ನೀಡಿ ಮುಕ್ತಾಯಗೊಳಿಸಿ 2025ರ ಅಕ್ಟೋಬರ್ 29ರಂದು ಕೊಡಿಗೇಹಳ್ಳಿ ಪೊಲೀಸರು ನೀಡಿದ್ದ ಹಿಂಬರಹದ ಪ್ರತಿಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ದಾಖಲೆಗಳನ್ನು ಗಮನಿಸಿದರೆ, ದೂರುದಾರರು ಒದಗಿಸಿರುವ ಪತ್ರಿಕಾ ವರದಿಗಳನ್ನು ಗಮನಿಸದೆ ಅಥವಾ ದೂರುದಾರರಿಂದ ಯಾವುದೇ ಸಾಕ್ಷ್ಯಗಳನ್ನು ಪಡೆಯದೆ ಪೊಲೀಸರು ದೂರನ್ನು ಮುಕ್ತಾಯಗೊಳಿಸಿದ್ದಾರೆ. ದೂರುದಾರರು ಆರೋಪಿಗಳ ವಿರುದ್ಧ ಬೆಟ್ಟಿಂಗ್‌ನಲ್ಲಿ ತೊಡಗಿದ ಆರೋಪ ಮಾಡಿದ್ದಾರೆ. ಇದು ಶಾಸಕರ ಅಥವಾ ಜಿಲ್ಲಾಧಿಕಾರಿಗಳ ಅಧಿಕೃತ ಕರ್ತವ್ಯದ ಭಾಗವಲ್ಲ. ಆದ್ದರಿಂದ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರ ಅಥವಾ ಸರ್ಕಾರದ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಆರೋಪಿಗಳ ವಿರುದ್ಧ ಬಿಎನ್‌ಎಸ್‌ಎಸ್ ಸೆಕ್ಷನ್ 175(3) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

H R Nagabushan Vs G Parameshwar.pdf
Preview