ಹೊಸ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕಾಗಿ ಬೆಂಗಳೂರಿನ ಟರ್ಫ್ ಕ್ಲಬ್‌ನ ಭೂಮಿಯನ್ನು ಮುಂದಿನ ವಾರ ಮಂಜೂರು ಮಾಡಲು ಯೋಜಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರವು ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಭೂಮಿಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಶರಣ್ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಪರ ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು “ಹೊಸ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕಾಗಿ ಬೆಂಗಳೂರಿನ ಟರ್ಫ್ ಕ್ಲಬ್‌ನ ಭೂಮಿಯನ್ನು ಮುಂದಿನ ವಾರ ಮಂಜೂರು ಮಾಡುವ ಯೋಜನೆಯಿದೆ. ಈ ಕುರಿತಂತೆ ಟರ್ಫ್ ಕ್ಲಬ್ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸುತ್ತೇವೆ” ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ಪೀಠವು “ಹೊಸ ಕಟ್ಟಡವು ಮುಂದಿನ 30 ರಿಂದ 50 ವರ್ಷಗಳ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ನಿರ್ಮಾಣವಾಗಬೇಕು” ಎಂದು ಮೌಖಿಕವಾಗಿ ಹೇಳಿತು.
ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಪ್ರಸ್ತುತ ಸ್ಥಳಾವಕಾಶ ಮತ್ತು ಭವಿಷ್ಯದ ಅಗತ್ಯತೆಗಳನ್ನು ಪರಿಗಣಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫ್ಲೋರ್ ಏರಿಯಾ ರೇಷಿಯೋ (ಎಫ್ಎಆಎರ್) ವಿನಾಯಿತಿ ಸೇರಿದಂತೆ ಹಲವು ಕಾನೂನು ಅಡೆತಡೆಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ತಿಳಿಸಲು ಒಂದು ವಾರ ಅಥವಾ ಹತ್ತು ದಿನಗಳ ಕಾಲಾವಕಾಶ ನೀಡಬೇಕು” ಎಂದು ಕೋರಿದರು.
ಈ ಮನವಿಯನ್ನು ಪರಿಗಣಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.