BITCOIN and Karntanata HC 
ಸುದ್ದಿಗಳು

ಬಿಟ್‌ ಕಾಯಿನ್‌ ವರ್ಗಾವಣೆ ಪ್ರಕರಣ: ಎಫ್‌ಐಆರ್‌ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಪೂಜಾರ್‌

“ಅರ್ಜಿಯನ್ನು ಯಾವುದೇ ಕಾರಣಕ್ಕೂ ಮುಂದೂಡಲಾಗದು. ಊರ್ಜಿತತ್ವದ ಆಧಾರದಲ್ಲಿ ವಾದ ಮಂಡಿಸಬೇಕು. ಇಲ್ಲವಾದಲ್ಲಿ ದುರುದ್ದೇಶಪೂರಿತ ಕ್ರಮಕೈಗೊಳ್ಳಬಾರದು ಎಂದು ಮಾಡಿರುವ ಮಧ್ಯಂತರ ಆದೇಶ ತೆರವು ಮಾಡಲಾಗದು” ಎಂದ ನ್ಯಾಯಾಲಯ.

Bar & Bench

ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿ ಶ್ರೀಧರ್ ಕೆ. ಪೂಜಾರ್ ಅವರು ಕಾಟನ್‌ ಪೇಟೆ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಲು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ಹಿಂಪಡೆದರು.

ಬೆಂಗಳೂರಿನ ಕಾಟನ್‌ ಪೇಟೆ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಮುಂದಿನ ಕಾನೂನು ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶ್ರೀಧರ್‌ ಪೂಜಾರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು “ಮೊದಲನೇ ಪ್ರಕರಣದಲ್ಲಿ ಪೂಜಾರ್‌ಗೆ ಜಾಮೀನು ದೊರೆತಿದೆ. ಆನಂತರ ಕಾಟನ್‌ ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಕೈಗೆತ್ತುಕೊಂಡಿದ್ದಾರೆ. ಈ ಭಯದಿಂದ ನಾವು ಮಧ್ಯಂತರ ಆದೇಶ ಪಡೆದಿದ್ದೇವೆ. ಸದ್ಯ, ಅರ್ಜಿ ವಿಚಾರಣೆ ಮುಂದೂಡಬೇಕು” ಎಂದು ಕೋರಿದರು.

ಆಗ ಪೀಠವು “ಅರ್ಜಿಯನ್ನು ಯಾವುದೇ ಕಾರಣಕ್ಕೂ ಮುಂದೂಡಲಾಗದು. ಊರ್ಜಿತತ್ವದ ಆಧಾರದಲ್ಲಿ ವಾದ ಮಂಡಿಸಬೇಕು. ಇಲ್ಲವಾದಲ್ಲಿ ಕ್ರಮಕೈಗೊಳ್ಳಬಾರದು ಎಂದು ಮಾಡಿರುವ ಮಧ್ಯಂತರ ಆದೇಶ ತೆರವು ಮಾಡಲಾಗುವುದು” ಎಂದು ಖಡಕ್‌ ಆಗಿ ಹೇಳಿತು.

ಆಗ ಅರುಣ್‌ ಶ್ಯಾಮ್‌ ಅವರು “ಈ ನ್ಯಾಯಾಲಯದ ಮುಂದೆ ಎತ್ತಿರುವ ವಾದಗಳನ್ನು ಮುಕ್ತವಾಗಿರಿಸಿ ಅರ್ಜಿ ಹಿಂಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಕೋರಿರುವ ಮೆಮೊ ಸಲ್ಲಿಸಿದರು” ಎಂದು ಕೋರಿದರು.

ಆಗ ನ್ಯಾಯಾಲಯವು ಹಾಲಿ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರು ಎತ್ತಿರುವ ವಾದಗಳನ್ನು ಮುಕ್ತವಾಗಿರಿಸಿ, ಸೂಕ್ತ ಸಂದರ್ಭದಲ್ಲಿ ಸೂಕ್ತ ಪರಿಹಾರ ಕೋರಲು ಸ್ವತಂತ್ರರಾಗಿರುತ್ತಾರೆ ಎಂದು ಅರ್ಜಿಯನ್ನು ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ: ಡಾರ್ಕ್‌ನೆಟ್‌ ಮೂಲಕ ಮಾದಕ ವಸ್ತು ಖರೀದಿಸಿದ ಆರೋಪದ ಮೇಲೆ 2020ರ ನವೆಂಬರ್‌ನಲ್ಲಿ ಶ್ರೀಕಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಆಗ ಸಿಸಿಬಿಯಲ್ಲಿ ಪೂಜಾರ್‌ ತನಿಖಾಧಿಕಾರಿಯಾಗಿದ್ದರು. ಶ್ರೀಕಿ ಬಂಧನದೊಂದಿಗೆ ಕರ್ನಾಟಕದಲ್ಲಿ ಸೈಬರ್‌ ಅಪರಾಧಗಳು ಬೆಳಕಿಗೆ ಬಂದಿದ್ದವು. ಇದರಲ್ಲಿ 2019ರ ಜುಲೈ-ಆಗಸ್ಟ್‌ ಅವಧಿಯಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ಘಟಕದ 11.5 ಕೋಟಿ ರೂಪಾಯಿ ದೋಚಿದ್ದ ಪ್ರಕರಣವು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ 10ನೇ ಆರೋಪಿಯಾದ ಶ್ರೀಕಿಯನ್ನು 14.11.2020 ರಿಂದ 17.11.2020 ಹಾಗೂ 12ನೇ ಆರೋಪಿ ರಾಹುಲ್‌ ಖಂಡೇಲವಾಲಾ ಅವರನ್ನು 14.11.2020 ರಿಂದ 31.11.2020ರವರೆಗೆ ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಬಿಟ್‌ ಕಾಯಿನ್‌ ವರ್ಗಾವಣೆ, ಪಾಸ್‌ವರ್ಡ್‌ ಬದಲಾವಣೆ ಇತ್ಯಾದಿ ಕೃತ್ಯಕ್ಕೆ ಬಳಕೆ ಮಾಡಿದ ಆರೋಪ ಪೂಜಾರ್‌ ಮತ್ತಿತರರ ವಿರುದ್ದ ಇದೆ. ಈ ಸಂಬಂಧ ಸೈಬರ್‌ ಕ್ರೈಮ್‌ ಪೊಲೀಸರು ಐಪಿಸಿ ಸೆಕ್ಷನ್‌ಗಳಾದ 343, 344, 409, 426, 34, 36, 37, 201, 204 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66, 84ಸಿ ಅಡಿ ಪ್ರಕರಣ ದಾಖಲಿಸಿದ್ದಾರೆ.

ಆನಂತರ, ಈ ಪ್ರಕರಣದಲ್ಲಿ ಪೂಜಾರ್‌ ಅವರನ್ನು ಬಂಧಿಸಲು ತೆರಳಿದ್ದಾಗ ತನಿಖಾಧಿಕಾರಿಗಳ ಮೇಲೆ ಕಾರು ಹರಿಸಲು ಮುಂದಾದ ಆರೋಪದ ಮೇಲೆ ಐಪಿಸಿ ಸೆಕ್ಷನ್‌ಗಳಾದ 506, 504, 307, 332, 353ರ ಅಡಿ ಪ್ರಕರಣ ದಾಖಲಿಸಲಾಗಿದೆ.