ಸುದ್ದಿಗಳು

ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್‌ ಕದತಟ್ಟಿದ ಪ್ರತಾಪ್‌ ಸಿಂಹ

ಬಾನು ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿರುವ ಪ್ರತಾಪ್‌ ಸಿಂಹ ಸಲ್ಲಿಕೆ ಮಾಡಿರುವ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Bar & Bench

ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ಪುರಸ್ಕೃತೆ ಭಾನು ಮುಷ್ತಾಕ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿಯ ಮಾಜಿ ಸಂಸದ ಪ್ರತಾಪ್‌ ಸಿಂಹ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಬಾನು ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿರುವ ಪ್ರತಾಪ್‌ ಸಿಂಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿರುವ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ದಸರಾ ಹಬ್ಬವು ಹಿಂದೂಗಳ ಧಾರ್ಮಿಕ ಹಬ್ಬವಾಗಿದ್ದು, ನವರಾತ್ರಿಯ ಸಂದರ್ಭದಲ್ಲಿ ಆಚರಣೆ ಮಾಡಲಾಗುತ್ತದೆ. ಭಾನು ಮುಷ್ತಾಕ್‌ಗೆ ದಸರಾ ಉದ್ಘಾಟನೆ ಆಹ್ವಾನ ನೀಡಿರುವುದು ಸಾಂವಿಧಾನಿಕ ಹಕ್ಕುಗಳು ಮತ್ತು ಧಾರ್ಮಿಕ ಭಾವನೆಗಳ ಉಲ್ಲಂಘನೆಯಾಗಿದ್ದು, ಧಾರ್ಮಿಕ ಸಂಪ್ರದಾಯದ ಪಾವಿತ್ರ್ಯತೆಯನ್ನು ಕಾಪಾಡಬೇಕಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ದಸರಾ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ ಬಾನು ಮುಷ್ತಾಕ್‌ ಅವರು ಈ ಹಿಂದೆ ಹಿಂದೂ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ, ಭಾನು ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿಲುವು ಸಂವಿಧಾನದ 25 ಮತ್ತು 26ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಾದಿಸಲಾಗಿದೆ.

ಬಾನು ಅವರ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ಮೂಲಭೂತವಾಗಿ ವಿಭಿನ್ನವಾಗಿದ್ದರೂ ಅವರನ್ನು ದಸರಾಗೆ ಆಹ್ವಾನಿಸಲಾಗಿದೆ ಎಂದು ವಕೀಲೆ ನೇಹಾ ವೆಂಕಟೇಶ್‌ ಮೂಲಕ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಸೆಪ್ಟೆಂಬರ್‌ 3ರಂದು ಬಾನು ಮುಷ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತವು ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿತ್ತು.