ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಪುತ್ತೂರಿನ ನ್ಯಾಯಾಲಯವು ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಗಳಾದ ಜಾಕೀರ್ ಸವಣೂರು ಮತ್ತು ಶಫೀಕ್ ಅವರನ್ನು ಬೆಳ್ಳಾರೆ ಪೊಲೀಸರು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್ ಪಿ ಗೌಡ ಅವರ ಮುಂದೆ ಹಾಜರುಪಡಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿಗಳನ್ನು ಆಗಸ್ಟ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಂಗಳವಾರ ರಾತ್ರಿ 9 ಗಂಟೆಗೆ ಪ್ರವೀಣ್ ಕೊಲೆಯಾಗಿತ್ತು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ತಲವಾರಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆಯಲ್ಲಿ ಪ್ರವೀಣ್ ಅವರು ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದರು.