ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯವು 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬುಧವಾರ ಆದೇಶಿಸಿದೆ.
ಒಡಿಶಾದ ಕಟಕ್‌ನಲ್ಲಿ ಬಂಧಿಸಿ ಕರೆತಂದಿದ್ದ ಹಾಲಶ್ರೀಯನ್ನು ಬೆಂಗಳೂರಿನ ಒಂದನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಆನಂದ್ ಎಸ್. ಕರಿಯಮ್ಮನವರ್ ಅವರ ಮುಂದೆ ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು.
ಪ್ರಕರಣದ ಕುರಿತು ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಆರೋಪಿ ಹಾಲಶ್ರೀಯನ್ನು 10 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ನೀಡಿದರು. ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 1.5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪ ಹಾಲಶ್ರೀ ಮೇಲಿದೆ.
ಇದೇ ಪ್ರಕರಣದಲ್ಲಿ ಐದು ಕೋಟಿ ರೂಪಾಯಿ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.