ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದ ನ್ಯಾಯಾಂಗ ಸಮಿತಿ ತನಿಖೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾ ನಿರ್ದೇಶಕರು, ಪಂಜಾಬ್ ಪೊಲೀಸ್ ಭದ್ರತಾ ವಿಭಾಗದ ಡಿಜಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಸಮಿತಿಯು ಭದ್ರತಾ ಲೋಪಕ್ಕೆ ಉಂಟಾದ ಕಾರಣವನ್ನು ಪರಿಶೀಲಿಸಲಿದ್ದು ಪ್ರಧಾನ ಮಂತ್ರಿಗಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಲಹೆ ನೀಡುತ್ತದೆ.
ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ಪೀಠ ಈ ಆದೇಶ ನೀಡಿದೆ. ಈ ಹಿಂದಿನ ವಿಚಾರಣೆ ವೇಳೆ ತನಿಖೆಗೆ ನ್ಯಾಯಾಂಗ ಸಮಿತಿ ನೇಮಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿತ್ತಾದರೂ ಸಮಿತಿ ರಚನೆ ಬಗ್ಗೆ ಆಗ ನಿರ್ಧರಿಸಿರಲಿಲ್ಲ.
ಜನವರಿ 5 ರಂದು ಪಂಜಾಬ್‌ಗೆ ಭೇಟಿ ನೀಡಿದಾಗ, ಪ್ರಧಾನಿ ಬೆಂಗಾವಲು ಪಡೆ ಹುಸೇನಿವಾಲಾ ಮೇಲ್ಸೇತುವೆಯಲ್ಲಿ ಇಪ್ಪತ್ತು ನಿಮಿಷಗಳ ಕಾಲ ಸಿಲುಕಿಕೊಂಡಿತ್ತು. ಕೆಲ ಪ್ರತಿಭಟನಕಾರರು ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ.