ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಪೊಲೀಸ್ ಕಸ್ಟಡಿ ಶನಿವಾರ ಅಂತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇದರ ಬೆನ್ನಿಗೇ ವಿರೂಪಾಕ್ಷಪ್ಪ ಅವರ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಜಯಂತಕುಮಾರ್ ಅವರ ಮುಂದೆ ಹಾಜರುಪಡಿಸಲಾಯಿತು. ಇದನ್ನು ಪರಿಗಣಿಸಿದ ನ್ಯಾಯಾಲಯವು ಅವರನ್ನು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಲೋಕಾಯುಕ್ತ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿ, ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 6ಕ್ಕೆ ಮುಂದೂಡಿತು.
ಮಾರ್ಚ್ 28ರಂದು ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನ್ಯಾಯಾಲಯವು ನೀಡಿತ್ತು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದು, ಅವರ ಪುತ್ರ ಎರಡನೇ ಆರೋಪಿಯಾಗಿದ್ದಾರೆ.
ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ವಿರುದ್ಧ ಭ್ರಷ್ಟಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 7(ಎ), 7ಬಿ ಅಡಿ ಪ್ರಕರಣ ದಾಖಲಿಸಲಾಗಿದ್ದು, ಸಿದ್ದೇಶ್, ನಿಕೋಲಸ್ ಮತ್ತು ಗಂಗಾಧರ್ ಇತರೆ ಮೂವರು ಆರೋಪಿಗಳಾಗಿದ್ದಾರೆ.