Karnataka HC
Karnataka HC 
ಸುದ್ದಿಗಳು

[ಸ್ಮಶಾನಕ್ಕೆ ಜಾಗ] ಕಾನೂನು ಪ್ರಾಧಿಕಾರ ಸಲ್ಲಿಸಿರುವ ವರದಿ ಪ್ರತ್ಯೇಕಿಸಿ ನ್ಯಾಯಾಲಯಕ್ಕೆ ಸಲ್ಲಿಕೆ; ಹೈಕೋರ್ಟ್‌ ಸಮ್ಮತಿ

Bar & Bench

ರಾಜ್ಯದ ವಿವಿಧ ಗ್ರಾಮಗಳಲ್ಲಿ ಮೃತರ ಅಂತಿಮ ಸಂಸ್ಕಾರಕ್ಕೆ ಸ್ಮಶಾನ ಇಲ್ಲದಿರುವುದು ಮತ್ತು ಸ್ಮಶಾನ ಭೂಮಿಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರಗಳಿಂದ ವರದಿ ಸ್ವೀಕರಿಸಲಾಗಿದೆ. ವರದಿ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದ್ದು, ಎರಡು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಈಚೆಗೆ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪಾಲನೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ನಿವಾಸಿ ಮಹಮ್ಮದ್ ಇಕ್ಬಾಲ್ ಅವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್ ಹೇಮಲೇಖ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ರಾಜ್ಯದಾದ್ಯಂತ ಇರುವ ಗ್ರಾಮಗಳಲ್ಲಿ ಸ್ಮಶಾನ ಜಾಗ ಮತ್ತು ಅವುಗಳ ಒತ್ತುವರಿಗೆ ಸಂಬಂಧಿಸಿದಂತೆ ತಾಲ್ಲೂಕು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳಿಂದ ವರದಿ ಪಡೆಯಲು ನ್ಯಾಯಾಲಯವು 2023ರ ಜನವರಿ 10ರಂದು ಆದೇಶಿಸಿತ್ತು. ಈ ಕುರಿತು ವರದಿ ಸ್ವೀಕರಿಸಿದ್ದು, ಅವುಗಳನ್ನು ಪ್ರತ್ಯೇಕಿಸುವ ಕೆಲಸ ನಡೆಯುತ್ತಿದೆ. ಮುಂದಿನ ಎರಡು ವಾರಗಳಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹಿರಿಯ ವಕೀಲ ವಿಕ್ರಮ್‌ ಹುಯಿಲಗೋಳ ಮತ್ತು ವಕೀಲ ಪ್ರಜ್ವಲ ಎಸ್‌ ಅವರು ತಿಳಿಸಿದ್ದಾರೆ ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ.

ಸರ್ಕಾರದ ವಕೀಲರು ಮತ್ತು ಅರ್ಜಿದಾರರಿಗೆ ವರದಿ ನೀಡಿ, ನ್ಯಾಯಾಲಯಕ್ಕೆ ಅದೇ ವರದಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ವಕೀಲರಾದ ಕಿರಣ್‌ ಕುಮಾರ್‌ ಅವರು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ತೆರಳಿ, ದಾಖಲೆ ಪರಿಶೀಲಿಸಿಲು ಅವಕಾಶ ಕೋರಿರುವುದಕ್ಕೆ ಅನುಮತಿಸಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿದೆ.

ಕಳೆದ ವಿಚಾರಣೆಯಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿದೆ ಎಂದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಫಿಡವಿಟ್‌ ಸಲ್ಲಿಸಿದ್ದರು. ಇದರಲ್ಲಿ ರಾಜ್ಯದಲ್ಲಿ ಒಟ್ಟು 29,616 ಗ್ರಾಮಗಳಿವೆ. ಈ ಪೈಕಿ 1,394 ಗ್ರಾಮಗಳು ಜನವಸತಿ ಇಲ್ಲದ ಗ್ರಾಮಗಳಾಗಿವೆ. ಆದ್ದರಿಂದ, 28,222 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ನೀಡಬೇಕಿದ್ದು, ಈ ಪೈಕಿ 27,903 ಗ್ರಾಮಗಳಿಗೆ ಸ್ಮಶಾನ ಭೂಮಿ ಕಲ್ಪಿಸಲಾಗಿದೆ ಅಂದರೆ ಶೇ. 98.87ರಷ್ಟು ಸ್ಮಶಾನ ಭೂಮಿ ಕಲ್ಪಿಸಿದಂತಾಗಿದೆ. ಇನ್ನೂ 319 ಗ್ರಾಮಗಳಿಗೆ ಸ್ಮಶಾನ ಭೂಮಿ ಕಲ್ಪಿಸಬೇಕಿದೆ. 56 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ರಾಯಚೂರು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಸ್ಮಶಾನ ಭೂಮಿಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಆಡಳಿತಕ್ಕೆ ನೀಡಿದ್ದಾರೆ ಎಂದು ವಿವರಿಸಲಾಗಿತ್ತು. ಇದನ್ನು ಖಾತರಿಪಡಿಸಲು ತಾಲ್ಲೂಕು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ವರದಿ ಪಡೆದು ಪರಿಶೀಲಿಸುವಂತೆ ನ್ಯಾಯಾಲಯ ಆದೇಶಿಸಿತ್ತು.