CBSE EXAMS CANCELLED 
ಸುದ್ದಿಗಳು

ಕೋವಿಡ್‌ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ.

Bar & Bench

ಕೋವಿಡ್‌ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಮಂಗಳವಾರ ಕೇಂದ್ರ ಸರ್ಕಾರ ಕೈಗೊಂಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ.

ಕೋವಿಡ್‌ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಮತ್ತು ಭಾರತೀಯ ಪ್ರೌಢಶಿಕ್ಷಣ ಸರ್ಟಿಫಿಕೇಟ್‌ (ಐಸಿಎಸ್‌ಇ) 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಕೆಯಾಗಿದ್ದ ಬೆನ್ನಿಗೆ ಕೇಂದ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.

ಅನಿರ್ದಿಷ್ಟಾವಧಿಗೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿರುವ ಅಧಿಸೂಚನೆಯನ್ನು ವಜಾಗೊಳಿಸುವಂತೆ ಕೋರಿ ದೆಹಲಿ ಮೂಲದ ವಕೀಲೆ ಮಮತಾ ಶರ್ಮಾ ಕೋರಿದ್ದರು. ಪ್ರಸಕ್ತ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸಿ, ಕಳೆದ ವರ್ಷ ಅನುಸರಿಸಲಾಗಿದ್ದ ವಿಧಾನದ ಮೂಲಕ ಅಂಕ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಪ್ರಸಕ್ತ ವರ್ಷ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ನಡೆಸುವ ಕುರಿತು ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಲಿದೆ ಎಂದು ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.