Justice Ujjal Bhuyan, Justice S Venkatanarayana Bhatti  
ಸುದ್ದಿಗಳು

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಉಜ್ಜಲ್ ಭುಯಾನ್, ಎಸ್ ವಿ ಭಟ್ಟಿ ನೇಮಕಕ್ಕೆ ಕೇಂದ್ರ ಅಸ್ತು

ನ್ಯಾಯಮೂರ್ತಿ ಭುಯಾನ್ ಪ್ರಸ್ತುತ ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರೆ, ನ್ಯಾಯಮೂರ್ತಿ ಭಟ್ಟಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

Bar & Bench

ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹಾಗೂ ಕೇರಳ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ.

ಈ ವಿಚಾರವನ್ನು ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಟ್ವೀಟ್ ಮಾಡಿದ್ದಾರೆ.

"ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸುತ್ತಾ ಗೌರವಾನ್ವಿತ ರಾಷ್ಟ್ರಪತಿಗಳು,  ಗೌರವಾನ್ವಿತ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ಈ ಕೆಳಗಿನ ಇಬ್ಬರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್‌ ಮತ್ತು ಎಸ್‌ ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಹರ್ಷಿಸಿದ್ದಾರೆ" ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಈ ಇಬ್ಬರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಜುಲೈ 5ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಮೂವತ್ನಾಲ್ಕು ನ್ಯಾಯಮೂರ್ತಿಗಳ ಸಂಖ್ಯಾಬಲದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ 30 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಇಬ್ಬರು ನ್ಯಾಯಮೂರ್ತಿಗಳ ನೇಮಕಾತಿಯಿಂದಾಗಿ  ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿಕೆಯಾದಂತಾಗುತ್ತದೆ.