Karnataka High Court , exams 
ಸುದ್ದಿಗಳು

ಸಿಇಟಿ ಜನಿವಾರ ಪ್ರಕರಣ: ರಾಜ್ಯಾದ್ಯಂತ ಏಕರೂಪದ ಪರೀಕ್ಷಾ ವ್ಯವಸ್ಥೆಗೆ ಹೈಕೋರ್ಟ್‌ ನಿರ್ದೇಶನ

ಜನಿವಾರ ತೆಗೆಯಲು ಯಾವುದೇ ಸೂಚನೆ ನೀಡಿಲ್ಲ, ಅಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಕೆಇಎ ಭರವಸೆ.

Bar & Bench

ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹಾಜರಾಗುವ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯುವಂತೆ ಸೂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕರ್ನಾಟಕ ಹೈಕೋರ್ಟ್‌ ಈಚೆಗೆ ನಿರ್ದೇಶನ ನೀಡಿದೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯವು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ನ್ಯಾಯಮೂರ್ತಿಗಳಾದ ಅನು ಶಿವರಾಮನ್‌ ಮತ್ತು ಕೆ ಎಸ್‌ ಭರತ್‌ ಕುಮಾರ್‌ ಅವರ ವಿಭಾಗೀಯ ಪೀಠವು ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆಯೂ ಸೂಚಿಸಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ವಿಭಾಗೀಯ ಪೀಠವು ರಾಜ್ಯಾದ್ಯಂತ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಬೇಕಾದ ವ್ಯವಸ್ಥೆಗಳು ಏಕರೂಪವಾಗಿ ಇರುವಂತೆ ನೋಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟಿತು.

ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅಗತ್ಯ ಕ್ರಮಕೈಗೊಂಡು ಸೂಚನೆಗಳನ್ನು ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಮತ್ತಷ್ಟು ವಿಚಾರಣೆಗೆ ವಿಷಯ ಉಳಿದಿಲ್ಲ ಎಂದು  ತಿಳಿಸಿತು.

ಆ ಹೇಳಿಕೆಯನ್ನು ದಾಖಲಿಸಿಕೊಂಡು ಅರ್ಜಿ ಇತ್ಯರ್ಥಪಡಿಸಿದ ನ್ಯಾಯಾಲಯ, ರಾಜ್ಯದಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತ ಮತ್ತು ಏಕರೂಪದ ರೀತಿಯಲ್ಲಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಆದೇಶಿಸಿತು.

ಮಹಾಸಭಾದ ಪರ ವಕೀಲರು, “ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿ ಪರೀಕ್ಷೆಗೆ ಹಾಜರಾಗಲು ಆಯ್ದ ರೀತಿಯಲ್ಲಿ ಅವಕಾಶ ನಿರಾಕರಿಸಿರುವುದು ತಾರತಮ್ಯದಿಂದ ಕೂಡಿದೆ. ಈ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರವೂ ಅಂತಹ ಘಟನೆಗಳು ನಡೆದಿವೆ. ಆದ್ದರಿಂದ ಪರೀಕ್ಷೆಗಳ ನಿರ್ವಹಣೆ ಹಾಗೂ ವಿಶೇಷವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ನಡೆಸುವ ದೈಹಿಕ ತಪಾಸಣೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರಾಧಿಕಾರದ ಪರ ವಕೀಲರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ವಿದ್ಯಾರ್ಥಿಗಳು ಧರಿಸಿರುವ ಜನಿವಾರವನ್ನು ತೆಗೆಯುವಂತೆ ಯಾವುದೇ ಸೂಚನೆ ಅಥವಾ ಮಾರ್ಗಸೂಚಿ ನೀಡಿಲ್ಲ. ಅಂತಹ ಘಟನೆಗಳು ವರದಿಯಾದ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅವು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಹಾಗೂ ಪರೀಕ್ಷಾ ನಿರ್ವಹಣೆಯಲ್ಲಿ ತೊಡಗಿರುವ ಎಲ್ಲರಿಗೂ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ’’ ಎಂದು ವಿವರಿಸಿದರು.

ಅಲ್ಲದೆ, ವಿದ್ಯಾರ್ಥಿಗಳು ಪಾಲಿಸಬೇಕಾದ ಉಡುಪು ನಿಯಮಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ ಎಂದು ಪ್ರಾಧಿಕಾರ ತಿಳಿಸಿತು.

ಪ್ರರಕಣದ ಹಿನ್ನೆಲೆ:  2025ರ ಏಪ್ರಿಲ್‌ 17 ರಿಂದ 19ರವರೆಗೆ ನಡೆದ ಸಿಇಟಿಯಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕ್ರಮವನ್ನು ಅಸಾಂವಿಧಾನಿಕ, ಸ್ವೇಚ್ಛಾಚಾರದ ಹಾಗೂ ಕಾನೂನುಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಮಹಾಸಭಾ ಕೋರಿತ್ತು. ಜತೆಗೆ ಪರೀಕ್ಷೆಗಳ ನಿರ್ವಹಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿನ ದೈಹಿಕ ತಪಾಸಣೆಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದು ಕೋರಿತ್ತು.

ಇಂತಹ ಕ್ರಮಗಳಿಂದ ತೊಂದರೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಬೇಕು; ಜನಿವಾರ ಧರಿಸುವ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯ ಮಾಡದಂತೆ ಹಾಗೂ ಅವರ ಅತ್ಯಾವಶ್ಯಕ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸದಂತೆ ನಿರ್ದೇಶಿಸಬೇಕು ಎಂದು ಮನವಿ ಮಾಡಿತ್ತು.

Akhila Karnataka Brahmana Maha Sabha v. State of Karnataka.pdf
Preview