Halashri Swamiji and Karnataka HC 
ಸುದ್ದಿಗಳು

ಚೈತ್ರಾ ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

Bar & Bench

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಸರ್ಕಾರಿ ಅಭಿಯೋಜಕ ಎಸ್‌ ಎ ಬೆಳ್ಳಿಯಪ್ಪ ಅವರು ಅರ್ಜಿದಾರರ ವಿರುದ್ಧದ ತನಿಖಾಧಿಕಾರಿ ಇಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು, ಆರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ತನಿಖೆ ಪೂರ್ಣಗೊಂಡಂತಾಗಿದೆ. ಇದರಿಂದ ಅರ್ಜಿದಾರರು ತನಿಖೆ ಎದುರಿಸುವ ಅಗತ್ಯವಿಲ್ಲವಾಗಿದೆ. ಅರ್ಜಿದಾರರು ಪಡೆದಿದ್ದಾರೆ ಎನ್ನಲಾದ ಹಣವನ್ನು ಈಗಾಗಲೇ ತನಿಖಾಧಿಕಾರಿಗಳು ಜಪ್ತಿ ಮಾಡಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ ಎಂದು ವಿವರಿಸಿದರು.

ಮುಂದುವರೆದು, ಏಳಕ್ಕಿಂತ ಕಡಿಮೆ ವರ್ಷ ಶಿಕ್ಷೆ ವಿಧಿಸಬಹುದಾದ ಆರೋಪಗಳು ಅರ್ಜಿದಾರರ ಮೇಲಿದೆ. ಅವರ ಮೇಲಿನ ಆರೋಪಗಳ ಸತ್ಯಾಸತ್ಯತೆಯು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆಯಲ್ಲಿ ಬಯಲಾಗಬೇಕಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಲು ಇದು ಅರ್ಹ ಪ್ರಕರಣವಾಗಿದೆ ಎಂದು ಪೀಠದ ಗಮನಕ್ಕೆ ತಂದರು. ಈ ವಾದ  ಪರಿಗಣಿಸಿದ ಪೀಠವು ಹಾಲಶ್ರೀ ಸ್ವಾಮೀಜಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ತನ್ನಿಂದ ಐದು ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ, ಉದ್ಯಮಿ ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ದೂರುದಾರರಿಂದ 1.5 ಕೋಟಿ ರೂ. ಹಣ ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್‌ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಜಾಮೀನು ನೀಡಲು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿತ್ತು. ಇದರಿಂದ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.