ರಾಜ್ಯ ಸರ್ಕಾರವು ನಡೆಸಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಕ್ಷೇಪಿಸಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ 2026ರ ಮಾರ್ಚ್ 5ಕ್ಕೆ ನಿಗದಿಪಡಿಸಿದೆ.
ಸಮೀಕ್ಷೆಗಾಗಿ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ ಎನ್ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ರಾಜ್ಯ ಒಕ್ಕಲಿಗರ ಸಂಘ ಪ್ರತಿನಿಧಿಸಿದ್ದ ವಕೀಲ ಕೆ ಅಭಿಷೇಕ್ ಅವರು “ಹಾಲಿ ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ದತ್ತಾಂಶವನ್ನು ರಕ್ಷಿಸಿಡಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು. ಅದರಂತೆ ರಾಜ್ಯ ಸರ್ಕಾರವು ದತ್ತಾಂಶ ರಕ್ಷಿಸಿರುವುದರ ಸಂಬಂಧ ಅಫಿಡವಿಟ್ ಸಲ್ಲಿಸಿದೆ. ನಾಲ್ಕು ವಾರಗಳಲ್ಲಿ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿತ್ತು. ಆದರೆ, ಸರ್ಕಾರ ಅದನ್ನು ಅನುಪಾಲಿಸಿಲ್ಲ” ಎಂದರು.
ಈ ವೇಳೆ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಆಕ್ಷೇಪಣೆ ಸಿದ್ಧವಾಗಿದ್ದು, ಇಂದು ಸಲ್ಲಿಸುತ್ತಿದ್ದೇವೆ” ಎಂದರು.
ಇದನ್ನು ದಾಖಲಿಸಿದ ಪೀಠವು ರಿಜಿಸ್ಟ್ರಾರ್ ಜನರಲ್ ಅಂಡ್ ಸೆನ್ಸಸ್ ಕಮಿಷನರ್ ಆಫ್ ಇಂಡಿಯಾಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿತು. ಎಲ್ಲಾ ಪಕ್ಷಕಾರರಿಗೆ ವಾದಾಂಶ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅಂತಿಮ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಿತು.
ಸಮಾಜ ಸಂಪರ್ಕ ವೇದಿಕೆ ಪ್ರತಿನಿಧಿಸಿದ್ದ ವಕೀಲ ಕೆ ಅಭಿಷೇಕ್ ಅವರು “2014ರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದನ್ನು ಪ್ರಶ್ನಿಸಲಾಗಿತ್ತು. ಈಗ ಅದನ್ನು ಹಿಂಪಡೆಯಲಾಗುತ್ತಿದೆ. ಒಂದೊಮ್ಮೆ ಸರ್ಕಾರ 2014ರ ಸಮೀಕ್ಷೆಯನ್ನು ಜಾರಿಗೊಳಿಸಲು ಮುಂದಾದರೆ ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲೇರುವ ಸ್ವಾತಂತ್ರ್ಯ ಕಲ್ಪಿಸಬೇಕು” ಎಂದರು. ಇದನ್ನು ಆಲಿಸಿದ ನ್ಯಾಯಾಲಯವು ಅರ್ಜಿಯನ್ನು ವಿಲೇವಾರಿ ಮಾಡಿತು.
ಹಿಂದುಳಿದ ವರ್ಗಗಳ ವೇದಿಕೆ ಪರವಾಗಿ ಮುಖ್ಯಮಂತ್ರಿ ಚಂದ್ರು ಮತ್ತಿತರರು ಅರ್ಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇದೇ ವೇಳೆ ಮುಂದೂಡಿತು.
ಇನ್ನು, ತೃತೀಯ ಲಿಂಗಿಗಳಿಗೆ ಸಂಬಂಧಿಸಿದ ಸಮೀಕ್ಷೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸುತ್ತಿದೆಯೇ ವಿನಾ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿಲ್ಲ. ಹೀಗಾಗಿ, ಅವುಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಬೇಕು ಎಂಬ ಅಡ್ವೊಕೇಟ್ ಜನರಲ್ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಅವುಗಳನ್ನು ಪ್ರತ್ಯೇಕಿಸಿ, ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಿತು.
ಸೆಪ್ಟೆಂಬರ್ 25ರಂದು ನ್ಯಾಯಾಲಯವು ʼಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025ʼಗೆ ತಡೆ ನೀಡಲಾಗದು. ಆದರೆ, ರಾಜ್ಯದ ಜನರು ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ, ಇಲ್ಲಿ ಸಂಗ್ರಹಿಸಿದ ದತ್ತಾಂಶವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತನ್ನನ್ನು ಹೊರತುಪಡಿಸಿ ಬೇರಾರಿಗೂ ಸೋರಿಕೆಯಾಗದಂತೆ ಗೌಪ್ಯತೆ ಕಾಯ್ದುಕೊಳ್ಳಬೇಕು ಎಂದು ಆದೇಶಿಸಿತ್ತು.