ಚಂದ್ರಬಾಬು ನಾಯ್ಡು ಮತ್ತು ಸುಪ್ರೀಂ ಕೋರ್ಟ್ ಫೇಸ್ ಬುಕ್
ಸುದ್ದಿಗಳು

ಚಂದ್ರಬಾಬು ನಾಯ್ಡು ವಿರುದ್ಧ ಸಾಕ್ಷಿ ಹೇಳುವ ಅಧಿಕಾರಿಗಳಿಗೆ ಬೆದರಿಕೆ: ಸುಪ್ರೀಂಗೆ ಆಂಧ್ರ ಸರ್ಕಾರದ ಮಾಹಿತಿ

"ಅಧಿಕಾರಕ್ಕೆ ಬಂದ ನಂತರ, ತಮ್ಮ ವಿರುದ್ಧ ಹೇಳಿಕೆ ನೀಡಿದ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಬಹಿರಂಗವಾಗಿ ಹೇಳುತ್ತಿದ್ದಾರೆ" ಎಂದು ಹಿರಿಯ ವಕೀಲ ರೋಹಟ್ಗಿ ಇಂದು ನ್ಯಾಯಾಲಯಕ್ಕೆ ತಿಳಿಸಿದರು.

Bar & Bench

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣಗಳಲ್ಲಿ ಅವರ ವಿರುದ್ಧ ಹೇಳಿಕೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಾಯ್ಡು ಕುಟುಂಬ ಬೆದರಿಕೆ ಹಾಕುತ್ತಿದೆ ಎಂದು ಆಂಧ್ರಪ್ರದೇಶ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿತ್ತಲ್‌ ಅವರಿದ್ದ ಪೀಠದೆದುರು ಆಂಧ್ರಪ್ರದೇಶ ಸರ್ಕಾರದ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟ್ಗಿ ಇಂದು ವಾದ ಮಂಡಿಸಿದರು.

ಮುಂಬರುವ ರಾಜ್ಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳಿಗೆ ಈ ಬೆದರಿಕೆ ಹಾಕಲಾಗುತ್ತಿದೆ ಎಂದು ರೋಹಟ್ಗಿ ಕಳವಳ ವ್ಯಕ್ತಪಡಿಸಿದರು.

"ಆರೋಪಿಯ ಕುಟುಂಬ ಆಘಾತಕಾರಿಯಾಗಿ ನಡೆದುಕೊಂಡಿದೆ. ಅಧಿಕಾರಕ್ಕೆ ಬಂದ ನಂತರ, ತಮ್ಮ ವಿರುದ್ಧ ಹೇಳಿಕೆ ನೀಡಿದ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಬಹಿರಂಗವಾಗಿ ಹೇಳುತ್ತಿದ್ದಾರೆ. ಅವರು ಅಂತಹ ಎಲ್ಲಾ ಅಧಿಕಾರಿಗಳ ಬಗ್ಗೆ ಬರೆದಿಟ್ಟುಕೊಂಡಿದ್ದಾರೆ... ಚುನಾವಣೆಗೆ ಸ್ವಲ್ಪ ಮೊದಲು ಬೆದರಿಕೆ ಹೇಳಿಕೆಗಳು ಬಂದಿವೆ" ಎಂದು ಅವರು ತಿಳಿಸಿದರು.

ಈ ಆರೋಪಗಳಿಗೆ ಸಂಬಂಧಿಸಿದಂತೆ ಎರಡು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನಾಯ್ಡು ಅವರಿಗೆ ಸೂಚಿಸಿರುವ ನ್ಯಾಯಾಲಯ, ಬಳಿಕ ಅವರ ಉತ್ತರಕ್ಕೆ ರಾಜ್ಯ ಸರ್ಕಾರ ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 19ಕ್ಕೆ ನಡೆಯಲಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿತ್ತಲ್‌

ಕೌಶಲ್ಯ ಅಭಿವೃದ್ಧಿ ಯೋಜನೆಯ ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರಿಗೆ ಜಾಮೀನು ನೀಡಿದ ಆಂಧ್ರಪ್ರದೇಶ ಹೈಕೋರ್ಟ್‌ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಆಂಧ್ರಪ್ರದೇಶ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟ್ಗಿ ಮತ್ತು ರಂಜಿತ್ ಕುಮಾರ್ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗಿದ್ದರು. ನಾಯ್ಡು ಪರವಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದರು.