ಕೌಶಲ್ಯಾಭಿವೃದ್ಧಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 13) ಪ್ರಕರಣದ ವಿಚಾರಣೆ ನಡೆಸಲಿದೆ.
ಇತ್ತ ತಮಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕಾರಾಗೃಹ ಶಿಕ್ಷೆ ಬದಲು ಗೃಹ ಬಂಧನ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎಸಿಬಿ ನ್ಯಾಯಾಲಯ ಇಂದು ಕೂಡ ತಿರಸ್ಕರಿಸಿತು.
ಕೌಶಲ್ಯಾಭಿವೃದ್ಧಿ ಯೋಜನೆಗಾಗಿ ಮೀಸಲಿಟ್ಟ ಸರ್ಕಾರಿ ಹಣವನ್ನು ನಕಲಿ ಬಿಲ್ ಸೃಷ್ಟಿಸಿ ವಿವಿಧ ಬೇನಾಮಿ ಕಂಪೆನಿಗಳಿಗೆ ವರ್ಗಾಯಿಸಿದ್ದಕ್ಕೆ ಸಂಬಂಧಿಸಿದ ಹಗರಣ ಇದಾಗಿದ್ದು ನಾಯ್ಡು ಅವರನ್ನು ಕಳೆದ ಶನಿವಾರ ಬಂಧಿಸಲಾಗಿತ್ತು.