ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳ ಮಂಜೂರಾತಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.
ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.
ಕೇಂದ್ರ ಸರ್ಕಾರದ ಪರ ವಕೀಲ ಉನ್ನಿಕೃಷ್ಣನ್ ಅವರು “ರಾಜ್ಯಕ್ಕೆ ಹೆಚ್ಚುವರಿ ಅಂಗನವಾಡಿ ಕೇಂದ್ರಗಳನ್ನು ಮಂಜೂರು ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವಾಲಯದಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಆದ್ದರಿಂದ, ಕೊಂಚ ಕಾಲಾವಕಾಶ ನೀಡಬೇಕು” ಎಂದು ಕೋರಿದರು. ಅದನ್ನು ಪರಿಗಣಿಸಿದ ಪೀಠ, ಮಾಹಿತಿ ಒದಗಿಸಲು ಮೂರು ವಾರಗಳ ಕಾಲಾವಕಾಶ ನೀಡಿತು.
ಜತೆಗೆ, ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಎನ್ ವೇಣುಗೋಪಾಲಗೌಡ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಮಧ್ಯಂತರ ಶಿಫಾರಸ್ಸುಗಳನ್ನು ಜಾರಿಗೆ ತಂದಿರುವ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಿತು.