Hubli idgah maidan and Karnataka HC 
ಸುದ್ದಿಗಳು

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಆಯುಕ್ತರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಇದೆ ಎಂದ ಹೈಕೋರ್ಟ್‌

ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಶನ್ ಕಾಯಿದೆ 1976 ಸೆಕ್ಷನ್‌ 176ರ ಅಡಿ ಸಂಬಂಧಿತ ಅರ್ಜಿಗಳನ್ನು ವಿಲೇವಾರಿ ಮಾಡಲು ಆಯುಕ್ತರು ಅಧಿಕಾರ ಚಲಾಯಿಸಬಹುದಾಗಿದೆ ಎಂದಿರುವ ಪೀಠ.

Bar & Bench

ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ನಿರ್ಧಾರ ಕೈಗೊಳ್ಳುವ ಅಧಿಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ಹೇಳಿದೆ.

ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ ವಿಶೇಷ ಏಕಸದಸ್ಯ ಪೀಠವು ನಡೆಸಿತು.

“ಆಗಸ್ಟ್‌ 31ರಿಂದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳನ್ನು ಸೀಮಿತ ಉದ್ದೇಶಕ್ಕೆ ಪ್ರತಿಷ್ಠಾಪಿಸುವುದಕ್ಕೆ ಸಂಬಂಧಿಸಿದಂತೆ ಮತ್ತು ಸೀಮಿತ ಅವಧಿಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಹಿಂದೂ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಮನವಿ ನೀಡಿವೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ಮುಂದುವರಿದು, “ಪಾಲಿಕೆಯ ಆಸ್ತಿಯನ್ನು ತಾತ್ಕಾಲಿಕವಾಗಿ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಶನ್ ಕಾಯಿದೆ 1976 ಸೆಕ್ಷನ್‌ 176ರ ಅಡಿ ಸಂಬಂಧಿತ ಅರ್ಜಿಗಳನ್ನು ವಿಲೇವಾರಿ ಮಾಡಲು ಆಯುಕ್ತರು ಅಧಿಕಾರ ಚಲಾಯಿಸಬಹುದಾಗಿದೆ. ಕಾರ್ಪೊರೇಶನ್‌ ಮೈದಾನದಲ್ಲಿ, ಅಂತ್ಯ ಸಂಸ್ಕಾರ ಪ್ರದೇಶದಲ್ಲಿ ಯಾರೂ ಶಾಶ್ವತ ಪುತ್ಥಳಿ ನಿರ್ಮಿಸುವಂತಿಲ್ಲ. ಮೈದಾನವು ಮುಕ್ತ ಪ್ರದೇಶವಾಗಿದ್ದು, ಈಗಾಗಲೇ ಮೈದಾನ ಬಳಕೆಗೆ ಆಯುಕ್ತರಿಗೆ ಮನವಿಗಳು ಸಲ್ಲಿಕೆಯಾಗಿದ್ದು, ಕಾನೂನಿನ ಅನ್ವಯ ಅರ್ಜಿಗಳನ್ನು ವಿಲೇವಾರಿ ಮಾಡುವ ಸ್ವಾತಂತ್ರ್ಯ ಆಯುಕ್ತರಿಗೆ ಇದೆ. ಪಕ್ಷಕಾರರ ವಾದವನ್ನು ಮುಕ್ತವಾಗಿ ಇರಿಸಲಾಗಿದೆ” ಎಂದು ಪೀಠವು ಆದೇಶದಲ್ಲಿ ಸ್ಪಷ್ಟಪಡಿಸಿದೆ.

“ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಸಲು ಅನುಮತಿಸಿರುವ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದರೆ, ಈ ಅರ್ಜಿ ವಿಚಾರಣೆ ಕೋರಲು ಅರ್ಜಿದಾರರಿಗೆ ಸ್ವಾತಂತ್ರ್ಯವಿರಲಿದೆ” ಎಂದೂ ಹೈಕೋರ್ಟ್‌ ಆದೇಶದಲ್ಲಿ ಉಲ್ಲೇಖಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪದ್ಮನಾಭ ಮಹಾಲೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ವಾದಿಸಿದರು. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ ಬಿ ನರಗುಂದ್‌ ಹಾಜರಿದ್ದರು.