BS Yediyurappa and Supreme Court 
ಸುದ್ದಿಗಳು

ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ಪ್ರತಿವಾದಿಯಾಗಿಸಲು ಸುಪ್ರೀಂ ಅನುಮತಿ; ತಡೆ ವಿಸ್ತರಣೆ

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ದವೆ ಕೋರಿಕೆಯಂತೆ ರಾಜ್ಯ ಸರ್ಕಾರವನ್ನು ಅರ್ಜಿಯಲ್ಲಿ ಪ್ರತಿವಾದಿಯಾಗಿಸಲು ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಅಂತೆಯೇ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದಿರುವ ಪೀಠ.

Bar & Bench

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲು ಸೋಮವಾರ ಅನುಮತಿಸಿರುವ ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಅಲ್ಲದೇ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ವಿಧಿಸಿದ್ದ ತಡೆಯನ್ನು ವಿಸ್ತರಿಸಿದೆ.

ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು ಹಿಮಾ ಕೊಹ್ಲಿ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ದವೆ ಅವರ ಕೋರಿಕೆಯಂತೆ ರಾಜ್ಯ ಸರ್ಕಾರವನ್ನು ಅರ್ಜಿಯಲ್ಲಿ ಪ್ರತಿವಾದಿಯಾಗಿಸಲು ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಅಂತೆಯೇ ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ. ವಿಚಾರಣಾಧೀನ ನ್ಯಾಯಾಲಯದ ಆದೇಶಕ್ಕೆ ವಿಧಿಸಲಾಗಿರುವ ತಡೆಯಾಜ್ಞೆಯು ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ವಿಚಾರಣೆಯನ್ನು ನವೆಂಬರ್‌ 18ಕ್ಕೆ ಮುಂದೂಡಲಾಗಿದೆ.

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ ಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳನ್ನು ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.