ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ಡಿ ದೇವಿ, ಪುತ್ರ ತೇಜಸ್ವಿ ಯಾದವ್ ಇನ್ನಿತರರ ವಿರುದ್ಧ ವಿವಿಧ ಕ್ರಿಮಿನಲ್ ಆರೋಪಗಳನ್ನು ದೆಹಲಿ ನ್ಯಾಯಾಲಯ ಸೋಮವಾರ ನಿಗದಿಪಡಿಸಿದೆ.
ರೌಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ಈ ಆದೇಶ ಹೊರಡಿಸಿದ್ದಾರೆ.
ನ್ಯಾಯಾಲಯ ಲಾಲು ಯಾದವ್ ಅವರ ವಿರುದ್ಧ ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಹಾಗೂ ವಂಚನೆಯ ಆರೋಪ ನಿಗದಿಪಡಿಸಿದ್ದು ತೇಜಸ್ವಿ ಯಾದವ್ ಮತ್ತು ರಾಬ್ಡಿ ದೇವಿ ಅವರ ವಿರುದ್ಧ ಪಿತೂರಿ ಮತ್ತು ವಂಚನೆ ಸೇರಿದಂತೆ ಹಲವಾರು ಆರೋಪಗಳನ್ನು ನಿಗದಿಪಡಿಸಲಾಗಿದೆ.
ಆರೋಪಿಗಳು ತಮ್ಮ ವಿರುದ್ಧದ ಆರೋಪ ನಿರಾಕರಿಸಿರುವುದರಿಂದ ವಿಚಾರಣೆ ಮುಂದುವರೆಯುತ್ತದೆ.
ಲಾಲು ಪ್ರಸಾದ್ ಅವರು ರೈಲ್ವೆ ಸಚಿವರಾಗಿದ್ದಾಗ ರಾಂಚಿ ಮತ್ತು ಪುರಿಯಲ್ಲಿನ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮಕ್ಕೆ( ಐಆರ್‌ಸಿಟಿಸಿ) ಸೇರಿದ ಹೊಟೆಲ್‌ಗಳನ್ನು ಸುಜಾತಾ ಹೊಟೆಲ್ಸ್ ಎನ್ನುವ ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲು ಟೆಂಡರ್ ನಿಯಮವಳಿಗಳನ್ನು ಬದಲಿಸಿತ್ತು ಎನ್ನುವುದು ಸಿಬಿಐ ಆರೋಪ. ಗುತ್ತಿಗೆಗೆ ಬದಲಾಗಿ ಲಾಲು ಅವರ ಪತ್ನಿ ರಾಬ್ಡಿ ದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರಿಗೆ ಕೋಟಿಗಟ್ಟಲೆ ಬೆಲೆಬಾಳುವ ಭೂಮಿಯನ್ನು ಕಡಿಮೆ ಬೆಲೆಗೆ ವರ್ಗಾಯಿಸಿತ್ತು ಎಂದು ಸಿಬಿಐ ಆರೋಪಿಸಿತ್ತು.
ಲಾಲು ಮತ್ತವರ ಕುಟುಂಬಸ್ಥರು ತನಿಖೆಯನ್ನು ಪ್ರಶ್ನಿಸಿದ್ದು, ತಮ್ಮ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ. ಪ್ರಕರಣ ರಾಜಕೀಯ ಪ್ರೇರಿತ ಎಂದು ಅವರು ವಾದಿಸಿದ್ದರು.