ಅಕ್ರಮ ಹಣ ವರ್ಗಾವಣೆ ಪ್ರಕರಣದದಲ್ಲಿ ಆರೋಪಿಯಾಗಿರುವ ದೆಹಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದರ್ ಜೈನ್ ಅವರನ್ನು ಜೂನ್ 9ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶ ಮಾಡಿದೆ.
ಜಾರಿ ನಿರ್ದೇಶನಾಲಯವು ಜೈನ್ ಅವರನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿದ್ದನ್ನು ಪರಿಗಣಿಸಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆದೇಶಿಸಿದ್ದಾರೆ.
ಭ್ರಷ್ಟಚಾರ ಆರೋಪಕ್ಕೆ ಸಂಬಂಧಿಸಿದಂತೆ ಜೈನ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜೈನ್ ಅವರನ್ನು ಬಂಧಿಸಿದೆ.
ಆಪ್‌ನ ಹಿರಿಯ ನಾಯಕರಾದ ಜೈನ್ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ, ಗೃಹ, ಇಂಧನ, ಲೋಕೋಪಯೋಗಿ, ಕೈಗಾರಿಕೆ, ನಗಾರಭಿವೃದ್ಧಿ, ನೀರಾವರಿ ಮತ್ತು ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾರೆ.
ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಜೈನ್ ಅವರು ಮತ್ತೊಬ್ಬರ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡುತ್ತಿದ್ದರೆ ಎಂಬುದು ತಿಳಿದಿಲ್ಲ. ಅಕ್ರಮ ಹಣ ವರ್ಗಾವಣೆಯ ಇತರೆ ಫಲಾನುಭವಿಗಳು ಯಾರು ಎಂಬುದನ್ನು ಪತ್ತೆ ಮಾಡಬೇಕಿದೆ. ಒಂದು ಬಾರಿಯ ಅಪರಾಧವಲ್ಲ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ ಹೆಚ್ಚಿನ ಮಾಹಿತಿ ಲಭ್ಯವಾಗಬಹುದು. ಇದಕ್ಕಾಗಿ ಅವರನ್ನು 14 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದರು.
ಜೈನ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎನ್ ಹರಿಹರನ್ ಅವರು “ಸಿಬಿಐ ದಾಖಲಿಸಿರುವ ಪ್ರಕರಣದಲ್ಲೂ ಯಾವುದೇ ಆದಾಯದ ಮೂಲದತ್ತ ಬೆರಳು ಮಾಡಲು ಜಾರಿ ನಿರ್ದೇಶನಾಲಯಕ್ಕೆ ಸಾಧ್ಯವಾಗಿಲ್ಲ” ಎಂದರು.
ಇತ್ತ ಜೈನ್ ಅವರ ಬಂಧನದ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ ಎನ್ನುವ ಆರೋಪ ಕೇಳಿ ಬಂದಿದೆ. ಜೈನ್ ಮುಂಬರಲಿರುವ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ಬಂಧನವು ರಾಜಕೀಯ ಪ್ರೇರಿತವಾಗಿದೆ ಎಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.