ಅರವಿಂದ್ ಕೇಜ್ರಿವಾಲ್ ಮತ್ತು ಇ ಡಿ
ಅರವಿಂದ್ ಕೇಜ್ರಿವಾಲ್ ಮತ್ತು ಇ ಡಿ ಅರವಿಂದ್ ಕೇಜ್ರಿವಾಲ್ (ಫೇಸ್‌ಬುಕ್‌)
ಸುದ್ದಿಗಳು

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಸಲಿರುವ ದೆಹಲಿ ಹೈಕೋರ್ಟ್

Bar & Bench

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ ಡಿ) ತನ್ನನ್ನು ಬಂಧಿಸಿರುವುದನ್ನು ಮತ್ತು ವಿಚಾರಣಾ ನ್ಯಾಯಾಲಯ ಇ ಡಿ ವಶಕ್ಕೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು  ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಅವರು ಬುಧವಾರ ಬೆಳಿಗ್ಗೆ 10:30ಕ್ಕೆ ಪ್ರಕರಣ ಆಲಿಸಲಿದ್ದಾರೆ.

ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ

ಕೇಜ್ರಿವಾಲ್ ಅವರು ಮಾರ್ಚ್ 23ರಂದು ಹೈಕೋರ್ಟ್ ಮೊರೆ ಹೋಗಿದ್ದರು. ತುರ್ತು ವಿಚಾರಣೆಗಾಗಿ ಅವರು ಮಾಡಿದ್ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿರಲಿಲ್ಲ.

ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಮರುದಿನ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಅವರನ್ನು ಮಾರ್ಚ್ 28ರವರೆಗೆ ಇ ಡಿ ವಶಕ್ಕೆ ನೀಡಿತ್ತು.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರು ಪ್ರಮುಖ ಸಂಚುಕೋರ ಎಂದು ಇ ಡಿ ಹೇಳಿದೆ.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 17, 2022ರಂದು ಮೊದಲಿಗೆ ಪ್ರಕರಣ ದಾಖಲಿಸಿಕೊಂಡಿತ್ತು. ಜುಲೈ 20, 2022ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು. 

ನೀತಿ ರೂಪಿಸುವ ಹಂತದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು, ಅಪರಿಚಿತ ಮತ್ತು ಅನಾಮಧೇಯ ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ ಶಾಸಕಿ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಪುತ್ರಿ ಕೆ ಕವಿತಾ ಅವರನ್ನು ಇ ಡಿ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪ ಮುಖ್ಯಮಂತ್ರ ಮನೀಶ್ ಸಿಸೋಡಿಯಾ ಹಾಗೂ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಈಗಾಗಲೇ ಸೆರೆವಾಸ ಅನುಭವಿಸುತ್ತಿದ್ದಾರೆ.