ತಮಗೆ ನೀಡಲಾದ ಸರ್ಕಾರಿ ಬಂಗಲೆಯಲ್ಲಿ ವಾಸಿಸಲು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಮತ್ತು ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.
ನಿಯಮ ಉಲ್ಲಂಘನೆಯಾಗಿದ್ದರೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಸಮರ್ಥರಿದ್ದಾರೆ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠ ತಿಳಿಸಿತು.
"ಅರ್ಜಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸುವುದು ಸೂಕ್ತ ಎನಿಸದು" ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡ ಸಂಜೀವ್ ಜೈನ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಮಾರ್ಚ್ 2023ರಲ್ಲಿ ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರ ಬಂಧನವಾಗಿದ್ದರೂ ಅವರ ಇಡೀ ಕುಟುಂಬ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದೆ. ಸರ್ಕಾರದಲ್ಲಿ ಸಚಿವೆಯಾಗಿದ್ದಾಗಲೇ ಅತಿಶಿ ಮಾಡಿದ್ದ ಮನವಿಯಂತೆ ಅವರಿಗೆ ಬಂಗಲೆ ಮಂಜೂರು ಮಾಡಲಾಗಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಅತಿಶಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಿಯಮ ಉಲ್ಲಂಘನೆಯಿಂದ ಉಂಟಾದ ಹಾನಿಗೆ ಪರಿಹಾರ ವಸೂಲಿ ಮಾಡುವಂತೆ ಪಿಐಎಲ್‌ನಲ್ಲಿ ಜೈನ್ ಅವರು ಕೋರಿದ್ದರು.