ಸುದ್ದಿಗಳು

ದ್ವೇಷ ಭಾಷಣ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿದ್ದ ಕಾರಟ್ ಅರ್ಜಿ ದೆಹಲಿ ಹೈಕೋರ್ಟ್‌ನಿಂದ ತಿರಸ್ಕಾರ

Bar & Bench

ದ್ವೇಷಭಾಷಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಪಿಐ(ಎಂ) ನಾಯಕರಾದ ಬೃಂದಾ ಕಾರಟ್ ಮತ್ತು ಕೆ ಎಂ ತಿವಾರಿ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು ಅರ್ಜಿಯನ್ನು ವಜಾಗೊಳಿಸಿದರು. ಸಿಎಎ ಪ್ರತಿಭಟನೆ ನಡೆಯುತ್ತಿದ್ದಾಗ ದೆಹಲಿ ವಿಧಾನಸಭಾ ಚುನಾವಣೆ ವೇಳೆ ಇಬ್ಬರೂ ಬಿಜೆಪಿ ನಾಯಕರು ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಬೇಕು ಎಂಬ ಮನವಿಯನ್ನು ದೆಹಲಿ ನ್ಯಾಯಾಲಯ ಕೂಡ ಈ ಹಿಂದೆ ತಿರಸ್ಕರಿಸಿತ್ತು.

ದೂರುದಾರರಾದ ಕಾರಟ್ ಮತ್ತು ತಿವಾರಿ ಅವರು ಬಿಜೆಪಿ ನಾಯಕರನ್ನು ವಿಚಾರಣೆಗೆ ಒಳಪಡಿಸುವ ಸಲುವಾಗಿ ಸೂಕ್ತ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಅವರು ತಮ್ಮ ಆದೇಶದಲ್ಲಿ ಈ ಹಿಂದೆ ತಿಳಿಸಿದ್ದರು. ಈ ಆದೇಶವನ್ನು ವಜಾಗೊಳಿಸುವಂತೆ ಕೋರಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು. ಅಧೀನ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಿಲ್ಲ ಎಂದ ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಲು ತಿರಸ್ಕರಿಸಿತು. ಪ್ರಕರಣದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಏಕೆ ಬೇಕು ಎನ್ನುವುದನ್ನು ಸಮರ್ಥಿಸುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಇದೇ ವೇಳೆ ಹೇಳಿತು.

ಸಿಎಎ ಪ್ರತಿಭಟನೆಯಲ್ಲಿ ಶಾಂತಿಯುತವಾಗಿ ಪಾಲ್ಗೊಂಡಿದ್ದವರ ವಿರುದ್ಧ ʼದೇಶ್‌ ಕೆ ಗದ್ದಾರೋಂಕೋ; ಗೋಲಿ ಮಾರೋ ಸಾಲೋಂಕೊʼ ಎಂದು ಘೋಷಣೆಗಳನ್ನು ಠಾಕೂರ್‌ ಕೂಗಿದ್ದರು. ವರ್ಮಾ ಶಾಹೀನ್‌ ಬಾಗ್‌ನಲ್ಲಿ ಪ್ರತಿಭಟನಾನಿರತರಾಗಿದ್ದವರಿಗೆ ಬೆದರಿಕೆ ಹಾಕಿದ್ದರು ಎಂದು ಅರ್ಜಿದಾರರು ಆರೋಪಿಸಿದ್ದರು.