Arvind Kejriwal, Delhi LG VK Saxena and Supreme Court 
ಸುದ್ದಿಗಳು

ದೆಹಲಿ ಸೇವಾ ಸುಗ್ರೀವಾಜ್ಞೆ: ಆಪ್ ಸರ್ಕಾರದ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ಶಿಫಾರಸ್ಸು ಮಾಡಿದ ಸುಪ್ರೀಂ ಕೋರ್ಟ್

ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ಪ್ರಕರಣ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ.

Bar & Bench

ದೆಹಲಿಯಲ್ಲಿ ನಾಗರಿಕ ಸೇವಾ ಅಧಿಕಾರಿಗಳ ವರ್ಗಾವಣೆ ಮತ್ತು ನಿಯುಕ್ತಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಹೆಚ್ಚಿನ ಅಧಿಕಾರ ನೀಡುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ಸಾಂವಿಧಾನಿಕ ಪೀಠಕ್ಕೆ ಶಿಫಾರಸ್ಸು ಮಾಡಿದೆ.

ಈ ಕುರಿತಾದ ಆದೇಶವನ್ನು ಇಂದು ಸಂಜೆ ಸುಪ್ರೀಂ ಕೋರ್ಟ್‌ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ತಿಳಿಸಿತು.

ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ಪ್ರಕರಣ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಮೊದಲನೆಯ ಅರ್ಜಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ದೆಹಲಿ ರಾಷ್ಟ್ರ ರಾಜಧಾನಿ ಪ್ರದೇಶದ (ತಿದ್ದುಪಡಿ) ಸುಗ್ರೀವಾಜ್ಞೆ- 2023ನ್ನು ಪ್ರಶ್ನಿಸಿದೆ. ಈ ಸುಗ್ರೀವಾಜ್ಞೆಯು ಸೇವೆ, ವರ್ಗಾವಣೆ, ನಿಯುಕ್ತಿ ಹಾಗೂ ರಾಷ್ಟ್ರ ರಾಜಧಾನಿಗೆ ನಿಯುಕ್ತರಾಗುವ ಅಧಿಕಾರಿಗಳ ವಿಚಕ್ಷಣೆಯ ಅಧಿಕಾರವನ್ನು ಲೆ. ಗವರ್ನರ್‌ಗೆ ನೀಡುತ್ತದೆ.

ರಾಷ್ಟ್ರ ರಾಜಧಾನಿಯಲ್ಲಿ ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ದೆಹಲಿ ಸರ್ಕಾರಕ್ಕೆ ಅರ್ಹತೆ ಇದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ನೀಡಿದ ಒಂದು ವಾರದ ಬಳಿಕ ಮೇ ತಿಂಗಳಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿತ್ತು.

ರಾಜಧಾನಿಯಲ್ಲಿ ಕೆಲಸ ಮಾಡುವ ನಾಗರಿಕ ಸೇವಾ ಅಧಿಕಾರಿಗಳ ಮೇಲಿನ ನಿಯಂತ್ರಣವನ್ನು ಚುನಾಯಿತ ಸರ್ಕಾರದಿಂದ ಕಸಿದು, ಅದನ್ನು ಚುನಾಯಿತರಲ್ಲದ ಲೆಫ್ಟಿನೆಂಟ್‌ ಗವರ್ನರ್‌ಗೆ ನೀಡಲಾಗಿದೆ ಎಂದು ಎಎಪಿ ದೂರಿತ್ತು.  

ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಡಿಇಆರ್‌ಸಿ) ಅಧ್ಯಕ್ಷರ ಆಯ್ಕೆಗೆ ಸುಗ್ರೀವಾಜ್ಞೆಯ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಲೆಫ್ಟಿನೆಂಟ್‌ ಗವರ್ನರ್‌ ಬಳಸುತ್ತಿರುವುದಕ್ಕೆ ಎರಡನೇ ಮನವಿ ಆಕ್ಷೇಪ ವ್ಯಕ್ತಪಡಿಸಿದೆ.