BBMP and Karnataka HC
BBMP and Karnataka HC 
ಸುದ್ದಿಗಳು

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣ: ಎಜಿ ಮನವಿ, ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್‌

Bar & Bench

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಅಕ್ಟೋಬರ್‌ 4ಕ್ಕೆ ಮುಂದೂಡಿದೆ. ಇತ್ತೀಚೆಗೆ ನಂಜನಗೂಡು ಸಮೀಪದ ಹುಚ್ಚಗಣಿ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ದೇವಸ್ಥಾನವೊಂದನ್ನು ಜಿಲ್ಲಾಡಳಿತವು ತೆರವುಗೊಳಿಸಿದ್ದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣವು ರಾಜಕೀಯ ಮೇಲಾಟಗಳಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಅರ್ಜಿ ಕುರಿತು ತಾವು ವಾದ ಮಂಡಿಸುತ್ತೇವೆ. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಹೀಗಾಗಿ, ಪೀಠವು ಅಕ್ಟೋಬರ್‌ 4ಕ್ಕೆ ವಿಚಾರಣೆ ಮುಂದೂಡಿತು.

ಹೈಕೋರ್ಟ್ ಆಗಸ್ಟ್‌ 12ರಂದು ನೀಡಿದ ಸೂಚನೆಯಂತೆ 2009ರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ 277 ಅನಧಿಕೃತ ಕಟ್ಟಡಗಳ ತೆರವು ವಿಚಾರವಾಗಿ ಬಿಬಿಎಂಪಿ ಶುಕ್ರವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಿತ್ತು. ಜತೆಗೆ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕಾಲಮಿತಿ ನಿಗದಿಪಡಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಮತ್ತೊಂದೆಡೆ ಜಿಲ್ಲಾವಾರು ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಬಗ್ಗೆ ಸರ್ಕಾರ ಮಾಹಿತಿ ನೀಡಬೇಕಿತ್ತು. ಅರ್ಜಿ ವಿಚಾರಣೆಯನ್ನು ಪೀಠ ಮುಂದೂಡಿರುವುದರಿಂದ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸದ್ಯ ನಿರಾಳವಾಗುವಂತಾಗಿದೆ.