Election 
ಸುದ್ದಿಗಳು

[ಗ್ರಾಮ ಪಂಚಾಯಿತಿ ಚುನಾವಣೆ] ಮೀಸಲಾತಿ ನಿಗದಿಪಡಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ: ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಎಲ್ಲಾ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದೆ. ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದ್ದು, ಮೂವತ್ತು ದಿನಗಳಲ್ಲಿ ಮೀಸಲಾತಿ ನಿಗದಿಪಡಿಸುವಂತೆ ನಿರ್ದೇಶಿಸಲಾಗಿದೆ ಎಂದು ವಿವರಿಸಿದರು.

Bar & Bench

ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದ್ದು, ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್‌ ಹೇಮಲೇಖಾ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು “ಎಲ್ಲಾ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದೆ. ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದ್ದು, ಮೂವತ್ತು ದಿನಗಳಲ್ಲಿ ಮೀಸಲಾತಿ ನಿಗದಿಪಡಿಸುವಂತೆ ನಿರ್ದೇಶಿಸಲಾಗಿದೆ. ಈ ಕುರಿತು ಸ್ಥಿತಿಗತಿ ವರದಿ ಸಲ್ಲಿಸಲಾಗಿದೆ” ಎಂದರು.

ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಒಂದು ತಿಂಗಳು ಮುಂದೂಡಲಾಗುವುದು ಎಂದಿತು.

ಅಂತಿಮವಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯಿದೆಯ ಸೆಕ್ಷನ್‌ 5(5)ರ ಅಡಿ ಮೀಸಲಾತಿ ಸಂಬಂಧ 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂಬ ಸರ್ಕಾರದ ವಾದವನ್ನು ದಾಖಲಿಸಿ, ವಿಚಾರಣೆ ಮುಂದೂಡಿತು.

ಆನಂತರ, ಶಿವಮೊಗ್ಗ ನಗರ ಪಾಲಿಕೆ ಚುನಾವಣೆ ನಡೆಸುವಂತೆ ಮಾಜಿ ಉಪಮುಖ್ಯಮಂತ್ರಿ ಪುತ್ರ ಕೆ ಇ ಕಾಂತೇಶ್‌ ಸಲ್ಲಿಸಿರುವ ಅರ್ಜಿಯನ್ನು ವಕೀಲ ಎಂ ವಿನೋದ್‌ ಕುಮಾರ್ ಉಲ್ಲೇಖಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಗೆ 31.8.2018ರಂದು ಕೊನೆಯ ಬಾರಿಗೆ ಚುನಾವಣೆ ನಡೆದಿದ್ದು, 2023ರಲ್ಲಿ ಅವಧಿ ಮುಗಿದಿದೆ ಎಂದರು.

ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.