RSS Leader Kalladka Prabhakar Bhat and Karnataka HC 
ಸುದ್ದಿಗಳು

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ

2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ ಭಟ್ ಪ್ರಚೋದನಾಕಾರಿ ಭಾಷಣ ಮಾಡಿದ್ದರು.

Bar & Bench

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಭಾಕರ ಭಟ್ ಪರ ಹಿರಿಯ ವಕೀಲ ಎಂ‌ ಅರುಣ್ ಶ್ಯಾಮ್ ವಾದಿಸಿದರು.

ಪ್ರಕರಣದ ಹಿನ್ನೆಲೆ: 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದರು.

“ಮುಸ್ಲಿಂ‌ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿದ್ದಾರೆ. ಈ ಹೇಳಿಕೆಯು ಮಹಿಳೆಯರ ಖಾಸಗಿತ‌ನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲ ಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯಗಳನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ” ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.

ಡಾ.ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 354, 294, 509, 506, 153ಎ, 295, 295ಎ ಹಾಗೂ 298ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.