<div class="paragraphs"><p>Yati Narsinghanand, Dharam Sansad</p></div>

Yati Narsinghanand, Dharam Sansad

 
ಸುದ್ದಿಗಳು

ಧರ್ಮ ಸಂಸದ್‌ ದ್ವೇಷ ಭಾಷಣ: ಯತಿ ನರಸಿಂಗಾನಂದ ಜಾಮೀನು ಅರ್ಜಿ ತಿರಸ್ಕರಿಸಿದ ಹರಿದ್ವಾರ ನ್ಯಾಯಾಲಯ

Bar & Bench

ಕಳೆದ ವರ್ಷ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಯತಿ ನರಸಿಂಗಾನಂದ ಅವರ ಜಾಮೀನು ಅರ್ಜಿಯನ್ನು ಉತ್ತರಾಖಂಡದ ಸ್ಥಳೀಯ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಈ ಹಿಂದೆ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಹೊತ್ತಿರುವ ಯತಿ ನರಸಿಂಗಾನಂದ ಅವರ ಜಾಮೀನು ಅರ್ಜಿಯನ್ನು ಹರಿದ್ವಾರದ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ್ದಾರೆ. ಜನವರಿ 15ರಂದು ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಧಾರ್ಮಿಕ ಭಾವನೆ ಕೆರಳಿಸುವ ಸಲುವಾಗಿ ಮಾಡುವ ದುರುದ್ದೇಶಪೂರ್ವಕ ಕೃತ್ಯಗಳು), 509 (ಯಾವುದೇ ಮಹಿಳೆಯ ಘನತೆಗೆ ಧಕ್ಕೆ ತರುವುದು), 323 (ಸ್ವಯಂಪ್ರೇರಿತವಾಗಿ ಘಾಸಿ ಉಂಟು ಮಾಡುವುದು), 504 (ಶಾಂತಿ ಭಂಗ) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯ ಬೆಳೆಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ, ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಜಿತೇಂದ್ರ ತ್ಯಾಗಿ ಅಲಿಯಾಸ್ ವಸೀಮ್ ರಿಜ್ವಿ ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು. ಹರಿದ್ವಾರ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿದ ದ್ವೇಷ ಭಾಷಣದ ಕುರಿತು ತನಿಖೆ ನಡೆಸುವಂತೆ ಕೋರಿದ್ದ ಪಿಐಎಲ್‌ಗೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಕೇಂದ್ರ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತ್ತು.