ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್ ಸೇರಿ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಧಾರವಾಡದ ಗಿರೀಶ್ ಮಟ್ಟಣ್ಣವರ್, ದಕ್ಷಿಣ ಕನ್ನಡದ ಮಹೇಶ್ ಶೆಟ್ಟಿ ತಿಮರೋಡಿ, ವಿಠ್ಠಲ ಗೌಡ ಮತ್ತು ಬೆಂಗಳೂರಿನ ಟಿ ಜಯಂತ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ಏಕದಸ್ಯ ಪೀಠ ವಜಾಗೊಳಿಸಿದೆ.
ವಿಚಾರಣೆ ವೇಳೆ ಮಟ್ಟಣ್ಣವರ್ ಪರ ವಾದ ಮಂಡಿಸಿದ ವಕೀಲ ಎಸ್. ಬಾಲನ್ ಅವರು “ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು. ಆದರೆ, ದೂರುದಾರನಾಗಿರುವ ಮುಸುಕುಧಾರಿ ಚಿನ್ನಯ್ಯ ಸರ್ಕಾರಿ ನೌಕರನಲ್ಲ. ಅಸಂಜ್ಞೇಯ ಅಪರಾಧಕ್ಕೆ ಸಂಬಂಧಿಸಿದಂತೆ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರ“ ಎಂದು ವಾದಿಸಿದರು.
ಅಲ್ಲದೆ, ವಿಚಾರಣೆಯ ನೆಪದಲ್ಲಿ ತಮ್ಮ ಕಕ್ಷಿದಾರರಿಗೆ ಬೆಳಗ್ಗೆಯಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಐಟಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್, ಮ್ಯಾಜಿಸ್ಟ್ರೇಟ್ ಅವರಿಂದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
ತಾಂತ್ರಿಕ ನಿರ್ಬಂಧಗಳು ಆರೋಪಪಟ್ಟಿ ಸಲ್ಲಿಕೆಯಾದ ನಂತರವೇ ಅನ್ವಯವಾಗುತ್ತವೆ ಹೊರತು ತನಿಖೆಯ ಹಂತದಲ್ಲಲ್ಲ ಎಂದು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿದರು.
ಇದೇ ವೇಳೆ, ಅರ್ಜಿದಾರರ ಹಿಂದಿನ ನಿಲುವನ್ನು ನ್ಯಾಯಾಲಯದ ಗಮನಕ್ಕೆ ತಂದ ಜಗದೀಶ್, ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿಯಲ್ಲಿ ಮಟ್ಟಣ್ಣವರ್ ತನಿಖೆ ಸಮರ್ಪಕವಾಗಿ ನಡೆಯಬೇಕು ಎಂದು ಕೋರಿದ್ದರು. ಆದರೆ, ಇದೀಗ ತನಿಖೆ ತಮ್ಮ ವಿರುದ್ಧ ತಿರುಗುತ್ತಿದ್ದಂತೆ ಅದನ್ನೇ ರದ್ದುಗೊಳಿಸುವಂತೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು, “ಮೂಲ ಎಫ್‌ಐಆರ್ ಅನಾಮಿಕ ವ್ಯಕ್ತಿಗಳ ವಿರುದ್ಧ ದಾಖಲಾಗಿದೆ. ತನಿಖೆಯ ವೇಳೆ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಒಂದೆಡೆ ತನಿಖೆ ನಡೆಯಲಿ ಎನ್ನುತ್ತೀರಿ, ಇನ್ನೊಂದೆಡೆ ತನಿಖೆಯನ್ನೇ ರದ್ದು ಮಾಡಿ ಎನ್ನುತ್ತೀರಿ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದುಪಡಿಸುವಂತೆ ಕೋರುವುದು ಅಕಾಲಿಕ” ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟರು.
ಇದೇ ವೇಳೆ, ನ್ಯಾಯಾಧೀಶರು ಪ್ರಕರಣಗಳನ್ನು ನಿರ್ಧರಿಸುವಾಗ ಅನುಸರಿಸಬೇಕಾದ ನ್ಯಾಯಾಂಗ ನಿಲುವಿನ ಕುರಿತು ನ್ಯಾಯಮೂರ್ತಿಗಳು ಮಾರ್ಮಿಕವಾಗಿ ಮಾತನಾಡಿದರು.
“ನ್ಯಾಯಾಧೀಶರ ಕೆಲಸ ತಾವರೆ ಎಲೆಯ ಮೇಲಿನ ನೀರಿನಂತಿರಬೇಕು. ನೀರಿನಲ್ಲೇ ಬೆಳೆಯಬೇಕು, ಆದರೆ ನೀರನ್ನು ಅಂಟಿಸಿಕೊಳ್ಳಬಾರದು. ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ಮಾತ್ರ ತೀರ್ಪು ನೀಡಬೇಕೇ ಹೊರತು, ನೈತಿಕ ವಿಚಾರಗಳು ತೀರ್ಪಿನೊಳಗೆ ಇಣುಕಬಾರದು” ಎಂದು ಹೇಳಿದರು.
ಪ್ರಕರಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.
ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ವೈರುಧ್ಯಗಳು ಕಂಡುಬಂದಿದ್ದವು. ಅಲ್ಲದೆ, ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ವ್ಯವಸ್ಥಿತ ಷಡ್ಯಂತ್ರ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಯನ್ನು ತೀವ್ರಗೊಳಿಸಿತ್ತು.
ಚಿನ್ನಯ್ಯ ಅಲಿಯಾಸ್ ಚಿನ್ನ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಆರು ಮಂದಿಯ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆಗಳ ತಯಾರಿಕೆ ಆರೋಪಗಳ ಸಂಬಂಧ ತನಿಖೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಜಾಗೊಳಿಸುವ ಮೂಲಕ ನ್ಯಾಯಾಲಯ ಎಸ್‌ಐಟಿ ತನಿಖೆ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ.