Housing Minister V Somanna
Housing Minister V Somanna 
ಸುದ್ದಿಗಳು

ಅಕ್ರಮ ಆಸ್ತಿ ಗಳಿಕೆ: ಸಚಿವ ಸೋಮಣ್ಣ ವಿರುದ್ಧದ ಕ್ರಿಮಿನಲ್‌ ಪ್ರಕರಣ ವಿಚಾರಣೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್‌ ನಕಾರ

Siddesh M S

ವಸತಿ ಸಚಿವ ವಿ ಸೋಮಣ್ಣ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಬೆಂಗಳೂರಿನ ಮೂಡಲಪಾಳ್ಯದ ರಾಮಕೃಷ್ಣ ಅವರು ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ವಿಚಾರಣಾಧೀನ ನ್ಯಾಯಾಲಯವು ಈಚೆಗೆ ಆದೇಶಿಸಿರುವುದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿ ಸೋಮಣ್ಣ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿತು.

ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರುವುದಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮಣ್ಣ ಅವರು ವಿಚಾರಣಾಧೀನ ನ್ಯಾಯಾಲಯಕ್ಕೆ ಮನವಿ ಸಲ್ಲಿಸಬಹುದು. ಪ್ರಕರಣವು ಹೈಕೋರ್ಟ್‌ನಲ್ಲಿರುವುದನ್ನು ಗಮನದಲ್ಲಿಟ್ಟುಕೊಂಡು, ವಿಚಾರಣಾಧೀನ ನ್ಯಾಯಾಲಯ ಸದರಿ ಮನವಿಯನ್ನು ನಿರ್ಧರಿಸಬಹುದಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಸೋಮಣ್ಣ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವರದಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದೆ. ಆಕ್ಷೇಪಾರ್ಹ ಆದೇಶ ಮಾಡುವಾಗ ವಿಚಾರಣಾಧೀನ ನ್ಯಾಯಾಲಯವು ಕಾನೂನು ಪಾಲನೆ ಮಾಡಿಲ್ಲ” ಎಂದು ಆಕ್ಷೇಪಿಸಿದರು.

ಪ್ರತಿವಾದಿ ರಾಮಕೃಷ್ಣ ಅವರ ಪರವಾಗಿ ವಕೀಲ ಬಿ ಎನ್‌ ಜಗದೀಶ್‌ ಅವರು ನೋಟಿಸ್‌ ಪಡೆದುಕೊಂಡರು. ಜೂನ್‌ನಲ್ಲಿ ಮನವಿಯನ್ನು ವಿಚಾರಣೆಗೆ ನಿಗದಿಪಡಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಮಧ್ಯೆ, 110ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಹಾಗೂ ಹಾಲಿ ಮತ್ತು ಮಾಜಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್‌ ಕುಮಾರ್ ಅವರು ಶುಕ್ರವಾರ ಸಚಿವ ಸೋಮಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಮನವಿಯು ನಿರ್ವಹಣೆಗೆ ಅರ್ಹವಾಗಿಲ್ಲ ಎಂದು ವಜಾ ಮಾಡಿದ್ದಾರೆ.

ಸೋಮಣ್ಣ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ (ಎಸಿಬಿ) ಸಲ್ಲಿಸಿರುವ ಬಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿದ್ದು, ಅವರ ವಿರುದ್ಧ ವಿಶೇಷ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಮಹತ್ವದ ಆದೇಶ ಮಾಡಿತ್ತು. ಅಲ್ಲದೇ, ಏಪ್ರಿಲ್‌ 16ರಂದು ಖುದ್ದು ಹಾಜರಾಗುವಂತೆ ಸಚಿವ ಸೋಮಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಸೋಮಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಸೆಕ್ಷನ್‌ 13(1)(ಬಿ) (ಡಿ) ಮತ್ತು (ಇ) ಜೊತೆಗೆ ಸೆಕ್ಷನ್‌ 13(2)ರ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶ ಮಾಡಿದೆ.