D K Shivakumar, CBI and Karnataka HC
D K Shivakumar, CBI and Karnataka HC 
ಸುದ್ದಿಗಳು

ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ಫೆ. 24ರವರೆಗೆ ತಡೆ ನೀಡಿದ ಹೈಕೋರ್ಟ್‌

Bar & Bench

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಅರ್ಜಿದಾರರ ವಿರುದ್ಧ ಇದುವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ತನಿಖಾಧಿಕಾರಿಯು ಫೆಬ್ರವರಿ 24ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅಲ್ಲಿಯವರೆಗೆ ಸಿಬಿಐ ತನಿಖೆ ಮುಂದುವರಿಸಬಾರದು ಎಂದು ನ್ಯಾಯಾಲಯವು ಮಧ್ಯಂತರ ಆದೇಶ ಮಾಡಿದೆ.

ಇದಕ್ಕೂ ಮುನ್ನ, ಡಿ ಕೆ ಶಿವಕುಮಾರ್‌ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ಎಚ್‌ ಜಾಧವ್‌ ಅವರು “ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ತೆರನಾದ ಪ್ರಕರಣ ಇಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡಲಾಗುತ್ತಿದೆ. ಅರ್ಜಿದಾರರ ಪತ್ನಿ, ಮಗಳಿಗೂ ನೋಟಿಸ್‌ ನೀಡುವ ಮೂಲಕ ಅವರ ಮೇಲೂ ಒತ್ತಡ ಹೇರಲಾಗುತ್ತಿದೆ. ಸಿಬಿಐ ಕೈಪಿಡಿಯಲ್ಲಿನ ನಿಯಮಗಳನ್ನು ಪಾಲಿಸಿಲ್ಲ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಅರ್ಜಿದಾರರಿಗೆ ಸಿಬಿಐ ಮೇಲಿಂದ ಮೇಲೆ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ನೋಟಿಸ್‌ ನೀಡುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ” ಎಂದು ಆಕ್ಷೇಪಿಸಿದರು.

ಇದಕ್ಕೆ ಆಕ್ಷೇಪಿಸಿದ ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ಅವರು “2020ರಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ತಡೆ ಕೋರಲಾಗಿತ್ತು. ಆದರೆ, ಈ ಕೋರಿಕೆ ನಿರಾಕರಿಸಿದ್ದ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿತ್ತು. ಈಗ ತಡೆ ಕೋರಿ ಹೊಸ ಅರ್ಜಿ ಸಲ್ಲಿಸಲಾಗಿಲ್ಲ. ಬಹುತೇಕ ತನಿಖೆ ಪೂರ್ಣಗೊಂಡಿದ್ದು, ಆರು ತಿಂಗಳ ಒಳಗಾಗಿ ಅಂತಿಮ ವರದಿ ಸಲ್ಲಿಸಲಾಗುವುದು. ಹೀಗಾಗಿ, ಈ ಹಂತದಲ್ಲಿ ತನಿಖೆಗೆ ತಡೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದರು.

ಮುಂದುವರಿದು, “ಅರ್ಜಿದಾರರು ಚುನಾವಣಾ ಪ್ರಕ್ರಿಯೆಯಲ್ಲಿ ನಿರತರಾದರೆ ಅವರನ್ನು ಅಥವಾ ಅವರ ಕುಟುಂಬ ಸದಸ್ಯರನ್ನು ತನಿಖೆಯಲ್ಲಿ ಪಾಲ್ಗೊಳ್ಳಲು ಸೂಚಿಸಲಾಗುವುದು. ಬೇರೊಂದು ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ಸಿಬಿಐಗೆ ನಿರ್ದೇಶಿಸುವ ಮೂಲಕ ನ್ಯಾಯಾಲಯವು ರಕ್ಷಣೆ ಒದಗಿಸಿದೆ. ಅರ್ಜಿದಾರ ಶಿವಕುಮಾರ್‌ ಅವರ 21 ವರ್ಷದ ಪುತ್ರಿ ನೂರಾರು ಕೋಟಿ ಆಸ್ತಿ ಹೊಂದಿದ್ದಾರೆ. ಇದು ಆಕಾಶದಿಂದ ಉದುರಿಲ್ಲ. ಶೈಕ್ಷಣಿಕ ಸಂಸ್ಥೆಯ ಟ್ರಸ್ಟಿಯಾಗಿರುವ ಆಕೆಯು ಅದಕ್ಕೆ ವಿವರಣೆ ನೀಡಬೇಕು. ರಾಜಕಾರಣಿ ಮತ್ತು ಆತನ ಕುಟುಂಬ ಸದಸ್ಯರು ಸೇರಿದಂತೆ ಎಲ್ಲರಿಗೂ ಕಾನೂನು ಒಂದೇ ಆಗಿದೆ” ಎಂದರು.

ಪ್ರಕರಣದ ಹಿನ್ನೆಲೆ: 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್‌ ಕಾನೂನು ಬಾಹಿರವಾಗಿದೆ. ಈ ಪ್ರಕರಣದ ಎಫ್‌ಐಆರ್‌ನಲ್ಲಿ ನನ್ನ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು. ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆ ಕೇವಲ ಸಾರ್ವಜನಿಕ ಸೇವಕರಿಗೆ ಮಾತ್ರವೇ ಅನ್ವಯ ಆಗುತ್ತದೆ. ಕುಟುಂಬದ ಸದಸ್ಯರ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಿರುವುದು ಕಾನೂನಿಗೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ, ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಶಿವಕುಮಾರ್‌ ಅರ್ಜಿಯಲ್ಲಿ ಕೋರಿದ್ದಾರೆ.