Prajwal Revanna & Karnataka HC 
ಸುದ್ದಿಗಳು

ಅತ್ಯಾಚಾರ ಪ್ರಕರಣ: ಜೀವನ ಪರ್ಯಂತ ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಕದತಟ್ಟಿದ ಪ್ರಜ್ವಲ್‌ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಪ್ರಜ್ವಲ್‌ಗೆ 2025ರ ಆಗಸ್ಟ್‌ 2ರಂದು ಜೀವನ ಪರ್ಯಂತ ಸೆರೆವಾಸದ ಶಿಕ್ಷೆ ವಿಧಿಸಿತ್ತು. ಇದಾದ ಸರಿಸುಮಾರು ಎರಡು ತಿಂಗಳ ಬಳಿಕ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.

Bar & Bench

ಯಹೊಳೆನರಸೀಪುರದ ಗನ್ನಿಗಢ ಮತ್ತು ಬೆಂಗಳೂರಿನ ಬನಶಂಕರಿಯ ಮನೆಯಲ್ಲಿ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಬದಿಗೆ ಸರಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಬಸವರಾಜ ಸಪ್ಪಣ್ಣವರ್‌ ಮೂಲಕ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಕೆ ಮಾಡಲಾಗಿದ್ದು, ಇನ್ನಷ್ಟೇ ಅದು ವಿಚಾರಣೆಗೆ ನಿಗದಿಯಾಗಬೇಕಿದೆ. 2025ರ ಆಗಸ್ಟ್‌ 2ರಂದು ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ಗೆ ಜೀವನ ಪರ್ಯಂತ ಶಿಕ್ಷೆ ವಿಧಿಸಿತ್ತು. ಇದಾದ ಸರಿಸುಮಾರು ಎರಡು ತಿಂಗಳ ಬಳಿಕ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.

ಸಂತ್ರಸ್ತೆ ನುಡಿದಿರುವ ಸಾಕ್ಷಿ ಮತ್ತು ಆಕೆ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ವ್ಯತ್ಯಾಸವಿದೆ. ಘಟನೆಯ ಬಗ್ಗೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಪೊಲೀಸರು ಗನ್ನಿಗಢದ ಫಾರ್ಮ್‌ ಹೌಸ್‌ಗೆ ಬಂದಿದ್ದರು. ಅವರನ್ನು ನೋಡಿ ಸಂತ್ರಸ್ತೆಯು ಭೀತಿಗೊಂಡು ಅಲ್ಲಿಂದ ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಆನಂತರ ಪೊಲೀಸರು ಆಕೆಯನ್ನು ಎಸ್‌ಐಟಿಯ ಬೆಂಗಳೂರು ಕಚೇರಿಗೆ ಕರೆದೊಯ್ದು, ದೂರು ದಾಖಲಿಸಲು ಮನವಿ ಮಾಡಿದ್ದರು ಎಂದು ಹೇಳಲಾಗಿದೆ. ಇದರ ಪ್ರಕಾರ ನೋಡುವುದಾದರೆ ಪೊಲೀಸರು ಸಂತ್ರಸ್ತೆಯನ್ನು ಹಿಂಬಾಲಿಸಿ, ಆಕೆಯಿಂದ ಬಲವಂತದಿಂದ ದೂರು ಪಡೆದಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಪ್ರಜ್ವಲ್‌ ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

2021ರ ಜನವರಿ 1ರಿಂದ 2022ರ ಜನವರಿ 31ರವರೆಗೆ ಆರೋಪಿತ ಘಟನೆ ನಡೆದಿದ್ದು, 2024ರ ಮೇ 10ರಂದು ಸಂತ್ರಸ್ತೆಯು ಪೊಲೀಸರನ್ನು ಬಸವನಗುಡಿಯಲ್ಲಿ ಅತ್ಯಾಚಾರ ಎಸಗಿದ್ದ ಸ್ಥಳಕ್ಕೆ ಕರೆದೊಯ್ದಿದ್ದರು. ಇಲ್ಲಿ ಕೃತ್ಯ ನಡೆದ ಹಾಸಿಗೆ ಮತ್ತು ಮಂಚ ತೋರಿಸಿದ್ದು, ಪ್ರಾಸಿಕ್ಯೂಷನ್‌ನ 6ನೇ ಸಾಕ್ಷಿಯಾದ ಲಿಂಗನಮೂರ್ತಿ ಅವರು ಹಾಸಿಗೆಯಲ್ಲಿ ಕೆಲವು ಕಲೆಗಳು ಪತ್ತೆಯಾಗಿದ್ದವು ಎಂದು ತಿಳಿಸಿದ್ದಾರೆ. ಮೂರು ವರ್ಷಗಳಾದರೂ ಹಾಸಿಗೆಯ ಮೇಲಿನ ಬಟ್ಟೆಯನ್ನು ತೊಳೆಯದಿರಲು ಹೇಗೆ ಸಾಧ್ಯ ಎಂಬುದರ ಬಗ್ಗೆ ವಿಚಾರಣಾಧೀನ ನ್ಯಾಯಾಲಯಕ್ಕೆ ಯಾವುದೇ ಪ್ರಶ್ನೆ ಬಂದಿಲ್ಲ ಎಂದು ಆಕ್ಷೇಪಿಸಲಾಗಿದೆ.

2024ರ ಮೇ 28ರಂದು ಗನ್ನಿಗಢದ ಫಾರ್ಮ್‌ ಹೌಸ್‌ನಲ್ಲಿ ಕಾರ್ಮಿಕರು ಉಳಿದುಕೊಳ್ಳಲು ನಿರ್ಮಿಸಲಾಗಿದ್ದ ಮನೆಯಲ್ಲಿ ಕೆಲವು ಉಡುಪು ಮತ್ತು ತಲೆಗೂದಲನ್ನು ತನಿಖಾಧಿಕಾರಿ ಪತ್ತೆ ಮಾಡಿದ್ದಾಗಿ ತಿಳಿಸಿದ್ದಾರೆ. ಆದರೆ, ಸಂತ್ರಸ್ತೆಯು ತನಿಖಾಧಿಕಾರಿಯನ್ನು ಅಲ್ಲಿಗೆ ಕರೆದೊಯ್ಯದಿದ್ದರೂ ಅವರಿಗೆ ಕನಸು ಬಿದ್ದಿದ್ದಾರೂ ಹೇಗೆ? ಸಂತ್ರಸ್ತೆಯ ಗೈರಿನಲ್ಲಿ ತನಿಖಾಧಿಕಾರಿಯು ಉಡುಪು ಮತ್ತು ತಲೆಗೂದಲನ್ನು ಜಫ್ತಿ ಮಾಡಿರುವುದು ಗಂಭೀರ ಲೋಪವಾಗಿದ್ದು, ಅದಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಮೇಲ್ಮನವಿ ಅರ್ಜಿಯಲ್ಲಿ ವಾದಿಸಲಾಗಿದೆ.

ಉಡುಪಿನಲ್ಲಿ ವೀರ್ಯದ ಕಲೆ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಸಂತ್ರಸ್ತೆಯು 2022ರಲ್ಲಿ ಕೆಲಸ ತೊರೆದಿದ್ದು, ಎಲ್ಲಾ ಕೊಠಡಿಗಳನ್ನು ಲಾಕ್‌ ಮಾಡಲಾಗಿತ್ತು ಎಂದು 8ನೇ ಪ್ರಾಸಿಕ್ಯೂಷನ್‌ ಸಾಕ್ಷಿ ಹೇಳಿದ್ದಾರೆ. ಎರಡನೇ ಕೊಠಡಿಯು ಬ್ಯಾಟರಿ, ಖಾಲಿ ಬಾಕ್ಸ್‌ಗಳು, ಬಣ್ಣದ ಡಬ್ಬಿಗಳು, ಕಾರ್ಪೆಟ್‌ ಇಡುವ ಸ್ಥಳವಾಗಿ ಭಾಸವಾಗುತ್ತಿತ್ತು ಎಂದು ಹೇಳಲಾಗಿದೆ. ಮೂರು ವರ್ಷಗಳಿಂದ ಬೀಗಬಿದ್ದಿದ್ದ ಈ ಕೊಠಡಿಯಲ್ಲಿ ವೀರ್ಯದ ಕಲೆ ಮತ್ತು ತಲೆಗೂದಲು ಪತ್ತೆಯಾಗುವುದಾದರೂ ಹೇಗೆ ಎಂದು ಪ್ರಶ್ನಿಸಲಾಗಿದೆ. ಹೀಗೆ ಪ್ರಶ್ನೆಗಳನ್ನು ಎತ್ತುವ ಮೂಲಕ ವಿಚಾರಣಾಧೀನ ನ್ಯಾಯಾಲಯದ ತೀರ್ಪು ದೋಷಪೂರಿತವಾಗಿದೆ ಎಂದು ವಾದಿಸಲಾಗಿದೆ.

ಆಗಸ್ಟ್‌ 2ರಂದು ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ಗೆ ಜೀವನ ಪರ್ಯಂತ ಜೈಲು ಶಿಕ್ಷೆಯ ಜೊತೆಗೆ ₹11.60 ಲಕ್ಷ ದಂಡವನ್ನು ವಿಧಿಸಿತ್ತು. ಇದರಲ್ಲಿ ಸಂತ್ರಸ್ತೆಗೆ ₹11.25 ಲಕ್ಷವನ್ನು ಪರಿಹಾರದ ರೂಪದಲ್ಲಿ, ಬಾಕಿ ಹಣವನ್ನು ಸರ್ಕಾರದ ಖಾತೆಗೆ ಜಮೆ ನೀಡಲು ಆದೇಶಿಸಿತ್ತು.

376(2)(ಎನ್‌) (ಪದೇ ಪದೇ ಅತ್ಯಾಚಾರ) ಅಡಿ ಅಪರಾಧಕ್ಕೆ ಜೀವನ ಪರ್ಯಂತ ಶಿಕ್ಷೆ ಮತ್ತು ₹5 ಲಕ್ಷ ದಂಡ; 376(2)(ಕೆ) (ಪ್ರಭಾವಿ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರ) ಅಡಿ ಅಪರಾಧಕ್ಕೆ ಜೀವಾವಧಿ ಶಿಕ್ಷೆ, ₹5 ಲಕ್ಷ ದಂಡ; 354(ಬಿ) (ವಿವಸ್ತ್ರಗೊಳಿಸುವಾಗ ಆಕೆಯ ಮೇಲೆ ಹಲ್ಲೆ) ಅಡಿ ಅಪರಾಧಕ್ಕೆ 7 ವರ್ಷ ಶಿಕ್ಷೆ ₹50,000 ದಂಡ; 354-ಎ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಅಪರಾಧಕ್ಕೆ 3 ವರ್ಷ ಜೈಲು, ₹25,000 ದಂಡ; 354(ಸಿ) (ವಿವಸ್ತ್ರಗೊಳಿಸಿರುವ ಮಹಿಳೆಯನ್ನು ನೋಡಿ ಆನಂದಿಸುವುದು) ಅಡಿ ಅಪರಾಧಕ್ಕೆ 3 ವರ್ಷ ಜೈಲು, ₹25,000 ದಂಡ; 201 (ಅಪರಾಧ ಕೃತ್ಯದ ಸಾಕ್ಷಿ ನಾಶ) ಅಡಿ ಅಪರಾಧಕ್ಕೆ 3 ವರ್ಷ ಶಿಕ್ಷೆ, ₹25,000 ದಂಡ; ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ (ಖಾಸಗಿತನದ ಉಲ್ಲಂಘಿಸಿ ವಿಡಿಯೊ ಮಾಡಿ, ಪ್ರಸಾರ ಮಾಡಿರುವುದು) ಅಡಿ ಅಪರಾಧಕ್ಕೆ 3 ವರ್ಷ ಶಿಕ್ಷೆ, ₹25,000 ದಂಡ; 506 (ಕ್ರಿಮಿನಲ್‌ ಬೆದರಿಕೆ) 2 ವರ್ಷ ಶಿಕ್ಷೆ, ₹10,000 ದಂಡ ವಿಧಿಸಿತ್ತು. ಈ ತೀರ್ಪನ್ನು ಬದಿಗೆ ಸರಿಸುವಂತೆ ಪ್ರಜ್ವಲ್‌ ಕೋರಿದ್ದಾರೆ.