High Court of Karnataka 
ಸುದ್ದಿಗಳು

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಚುನಾವಣೆ ಕೋರಿಕೆ: ರಾಜ್ಯ ಸರ್ಕಾರ, ಆರ್‌ಬಿಐಗೆ ಹೈಕೋರ್ಟ್‌ ನೋಟಿಸ್‌

ಬ್ಯಾಂಕಿನ ನಿರ್ದೇಶಕ ಮಂಡಳಿಗೆ ಚುನಾವಣೆ ನಡೆಸುವಂತೆ 2023ರ ಅಕ್ಟೋಬರ್ 9ರಂದು ಅರ್ಜಿದಾರರ ಸಂಘ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿ 2025ರ ಏಪ್ರಿಲ್ 28ರಂದು ಸಹಕಾರ ಸಂಘಗಳ ನಿಬಂಧಕರು ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ಕೋರಲಾಗಿದೆ.

Bar & Bench

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಮಂಡಳಿ ಆಯ್ಕೆಗೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕಿನ ಠೇವಣಿದಾರರ ಸಂಘದ ಪರವಾಗಿ ಅದರ ಕಾರ್ಯದರ್ಶಿ ಜಿ ಕೆ ಗುರುರಾಜ ರಾವ್ ಹಾಗೂ ಪಿ ಮಂಜುಳಾ ರಾವ್, ಕೆ ಯೋಗಾನಂದ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್ ನಟರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ರಾಜ್ಯ ಸರ್ಕಾರ, ಆರ್‌ಬಿಐ ಹಾಗೂ ಶ್ರೀ ಗುರು ರಾಘವೇಂದ್ರ ಬ್ಯಾಂಕಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿತು.

ಬ್ಯಾಂಕಿಗೆ ನಿರ್ದೇಶಕ ಮಂಡಳಿಗೆ ಚುನಾವಣೆ ನಡೆಸುವಂತೆ 2023ರ ಅಕ್ಟೋಬರ್ 9ರಂದು ಅರ್ಜಿದಾರರ ಸಂಘ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿ 2025ರ ಏಪ್ರಿಲ್ 28ರಂದು ಸಹಕಾರ ಸಂಘಗಳ ನಿಬಂಧಕರು ಹೊರಡಿಸಿದ ಆದೇಶ ರದ್ದುಪಡಿಸಬೇಕು. ಬ್ಯಾಂಕಿನ ನಿರ್ದೇಶಕ ಮಂಡಳಿಗೆ ಚುನಾವಣೆ ನಡೆಸಲು ಸಹಕಾರ ಸಂಘಗಳ ನಿಬಂಧಕರಿಗೆ ಅನುವು ಮಾಡಿಕೊಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿರ್ದೇಶನ ನೀಡಬೇಕು. ಅದೇ ರೀತಿ ಅರ್ಜಿದಾರ ಸಂಘ ಹಾಗೂ ಷೇರುದಾರರು ಸೇರಿ ತಾತ್ಕಾಲಿಕ ನಿರ್ವಹಣಾ ಸಮಿತಿ ರಚಿಸಿಕೊಳ್ಳಲು ನ್ಯಾಯಾಲಯ ಅನುಮತಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.